ಹೈದರಾಬಾದ್: ಮಹಾಮಾರಿ ಕೊರೊನಾ ವೈರಸ್ನಿಂದಾಗಿ ಕರ್ನಾಟಕ ಒಂದೇ ವಾರದಲ್ಲಿ ಇಬ್ಬರು ರಾಜಕೀಯ ಧುರೀಣರನ್ನು ಕಳೆದುಕೊಂಡಿದೆ. ಕಳೆದ ಸೆಪ್ಟೆಂಬರ್ 17ರಂದು ರಾಜ್ಯಸಭೆ ಸದಸ್ಯ ಅಶೋಕ್ ಗಸ್ತಿ ಕೊರೊನಾದಿಂದ ಸಾವನ್ನಪ್ಪಿದ್ದರು. ಇದರ ಬೆನ್ನಲ್ಲೇ ಇದೀಗ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ನಿಧನರಾಗಿದ್ದಾರೆ.
ಮೂಲತ: ರಾಯಚೂರು ಜಿಲ್ಲೆಯವರಾದ ಅಶೋಕ್ ಗಸ್ತಿ ನಾಲ್ಕು ತಿಂಗಳ ಹಿಂದಷ್ಟೇ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಇವರಿಗೆ ಕೊರೊನಾ ಸೋಂಕು ತಗುಲಿದ್ದ ಕಾರಣ ಸೆಪ್ಟೆಂಬರ್ 2ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಇದರ ಜತೆಗೆ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ಸೆಪ್ಟೆಂಬರ್ 17ರಂದು ಕೊನೆಯುಸಿರೆಳೆದಿದ್ದರು.
ಡೆಡ್ಲಿ ಕೊರೊನಾ ಸೋಂಕಿಗೆ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಬಲಿ
ಇಂದು ಕೇಂದ್ರದಲ್ಲಿ ರೈಲ್ವೆ ಇಲಾಖೆ ರಾಜ್ಯ ಸಚಿವರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ 65 ವರ್ಷದ ಸುರೇಶ್ ಅಂಗಡಿ ವಿಧಿವಶರಾಗಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಗೆದ್ದು ಸಚಿವರಾಗಿದ್ದ ಇವರಿಗೆ ಎರಡು ವಾರಗಳ ಹಿಂದೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಹೀಗಾಗಿ ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. 1955 ಜೂನ್ 1ರಂದು ಬೆಳಗಾವಿ ಜಿಲ್ಲೆಯ ಕೆ.ಕೆ ಕೊಪ್ಪ ಗ್ರಾಮದಲ್ಲಿ ಜನಿಸಿದ್ದರು.
ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಇನ್ನಿಲ್ಲ
ಒಟ್ಟಿನಲ್ಲಿ ಒಂದೇ ವಾರದಲ್ಲಿ ಕರ್ನಾಟಕ ಇಬ್ಬರು ರಾಜಕೀಯ ಧುರೀಣರನ್ನು ಕಳೆದುಕೊಂಡಿರುವುದು ನಿಜಕ್ಕೂ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ.