ಚೆನ್ನೈ (ತಮಿಳುನಾಡು): ತಮ್ಮ ಕಚೇರಿ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಹೋಂ ಐಸೋಲೇಷನ್ನಲ್ಲಿದ್ದ ತಮಿಳುನಾಡು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಆರೋಗ್ಯ ಸಮಸ್ಯೆಯಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸದ್ಯ ಅವರಿಗೆ ಅಳ್ವಾರ್ ಪೇಟೆಯ ಖಾಸಗಿ ಆಸ್ಪತ್ರೆಯಲ್ಲಿ ಹಲವು ಆರೋಗ್ಯ ತಪಾಸಣೆ ಮಾಡಲಾಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.
ಒಂದು ವಾರದ ಹಿಂದೆ 80ಕ್ಕೂ ಹೆಚ್ಚು ತಮಿಳುನಾಡಿನ ರಾಜ್ಯಭವನ ಸಿಬ್ಬಂದಿ ಹಾಗೂ ಅಧಿಕಾರಿಗಳಲ್ಲಿ ಕೊರೊನಾ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಹೋಂ ಕ್ವಾರಂಟೈನ್ನಲ್ಲಿದ್ದರು.
ತಮಿಳುನಾಡು ರಾಜಭವನ ಪತ್ರಿಕಾ ಪ್ರಕಟಣೆ ಹೊರಡಿಸಿ ರಾಜ್ಯಪಾಲರಿಗೆ ವೈದ್ಯರು 7 ದಿನಗಳ ಕಾಲ ಕ್ವಾರಂಟೈನ್ಗೆ ಸೂಚಿದ್ದಾರೆ. ರಾಜಭವನದ ಅಧಿಕಾರಿಗಳು ಪರಿಸ್ಥಿತಿ ಅವಲೋಕಿಸುತ್ತಿದ್ದು, ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸುವಂತೆ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ.
ಹಿಂದಿನ ತಿಂಗಳಲ್ಲಿ ಸುಮಾರು 84 ರಾಜಭವನ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಕಚೇರಿಗೆ ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯಪಾಲರನ್ನು ಹೋಂ ಐಸೋಲೇಷನ್ನಲ್ಲಿ ಇಡಲಾಗಿತ್ತು.
ದೇಶದಲ್ಲಿ ತಮಿಳುನಾಡು ಅತಿ ಹೆಚ್ಚು ಕೊರೊನಾ ಪೀಡಿತ ರಾಜ್ಯಗಳಲ್ಲೊಂದಾಗಿದ್ದು, ಈಗ ಸುಮಾರು 56,738 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ 4,034 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು 1,90,966 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.