ಹೈದರಾಬಾದ್: ತೆಲಂಗಾಣ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಹೈಅಲರ್ಟ್ ಆಗಿರುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಸೋಮೇಶ್ ಕುಮಾರ್, ಎಲ್ಲಾ ಜಿಲ್ಲಾಡಳಿತ, ಜಿಲ್ಲಾಧಿಕಾರಿಗಳು, ಪೊಲೀಸ್ ಆಯುಕ್ತರು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಮಂಗಳವಾರ ತಡರಾತ್ರಿ ಅಧಿಕಾರಿಗಳಿಗೆ ಸೂಚನೆ ನೀಡಿರುವ ಅವರು, ಮುಖ್ಯಮಂತ್ರಿ ಕರೆ ಮಾಡಿ ರಾಜ್ಯದ ಪರಿಸ್ಥಿತಿಯ ಬಗ್ಗೆ ವಿಚಾರಿಸಿದ್ದಾರೆ. ಎಲ್ಲಾ ಜಿಲ್ಲಾಡಳಿತಗಳು ಎಚ್ಚರದಿಂದಿರಬೇಕೆಂದು ಆದೇಶಿಸಿದ್ದಾರೆ ಎಂದು ತಿಳಿಸಿದ್ದಾರೆ. ತೆಲಂಗಾಣದ ರಾಜಧಾನಿ ಹೈದರಾಬಾದ್ ಸೇರಿದಂತೆ ರಾಜ್ಯದಲ್ಲಿ 24 ಗಂಟೆಗಳ ಅವಧಿಯಲ್ಲಿ 20 ಸೆಂ.ಮೀ ದಾಖಲೆಯ ಮಳೆಯಾಗಿದೆ.
ನಾನು ಮತ್ತು ಡಿಜಿಪಿ ಹೈದರಾಬಾದ್ ಮಹಾನಗರ ಪಾಲಿಕೆ (ಜಿಹೆಚ್ಎಂಸಿ) ಯ ಹಿರಿಯ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ. ನೀವು ನಿಮ್ಮ ಜಿಲ್ಲೆ ಮತ್ತು ಮಂಡಲ ಮಟ್ಟದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಪರಿಸ್ಥಿತಿಯನ್ನು ನಿಭಾಯಿಸಿ. ತಗ್ಗು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ ಎಂದು ಮುಖ್ಯ ಕಾರ್ಯದರ್ಶಿ ಜಿಲ್ಲಾಡಳಿತಗಳಿಗೆ ಸೂಚಿಸಿದ್ದಾರೆ.
ಹೈದರಾಬಾದ್ ನಗರದಲ್ಲಿ ಭಾರೀ ಮಳೆಯಾದ ಹಿನ್ನೆಲೆ ನಗರದ ಬಂಡಲಗುಡ ಪ್ರದೇಶದಲ್ಲಿ ಮಂಗಳವಾರ ಮನೆಯ ಮೇಲೆ ಬಂಡೆ ಬಿದ್ದು ಮಗು ಸೇರಿದಂತೆ ಎಂಟು ಜನ ಮೃತಪಟ್ಟಿದ್ದರೆ, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.