ಶ್ರೀನಗರ(ಜಮ್ಮು-ಕಾಶ್ಮೀರ): ಲಷ್ಕರ್-ಇ-ತೋಯ್ಬಾ ಉಗ್ರ ಸಂಘಟನೆಗೆ ಸೇರಿದ ಮೂವರು ಭಯೋತ್ಪಾದಕರನ್ನು ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಇದೀಗ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ಜಮ್ಮು-ಕಾಶ್ಮೀರದ ಬಂಡಿಪೊರಾ ಜಿಲ್ಲೆಯಲ್ಲಿ ಉಗ್ರರನ್ನು ಬಂಧಿಸಲಾಗಿದ್ದು, ಕೆಲವೊಂದು ಮಹತ್ವದ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಎಲ್ಇಟಿ ಪರ ಕೆಲಸ ಮಾಡ್ತಿದ್ದ ಇವರು, ಉತ್ತರ ಕಾಶ್ಮೀರ ಜಿಲ್ಲೆಯ ಹಾಜಿನ್ ಪ್ರದೇಶದ ಮುಖ್ಯ ಮಾರುಕಟ್ಟೆಯಲ್ಲಿ ಪಾಕಿಸ್ತಾನದ ಧ್ವಜ ಹಾರಿಸಿರುವ ಆರೋಪ ಇದೆ.
ಈಗಾಗಲೇ ಇವರ ವಿರುದ್ಧ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದ್ದು, ತನಿಖೆ ನಡೆಸುತ್ತಿರುವುದಾಗಿ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬಂಧಿತರನ್ನ ಮಜೀಬ್ ಶಮಾಸ್, ತನ್ವೀರ್ ಅಹ್ಮದ್ ಮಿರ್ ಮತ್ತು ಇಮ್ತಿಯಾಜ್ ಅಹ್ಮದ್ ಶೇಖ್ ಎಂದು ಗುರುತಿಸಲಾಗಿದೆ. ಇವರಿಂದ ಒಂದು ಗ್ರೆನೇಡ್, ಹೊಲಿಗೆ ಯಂತ್ರ ಮತ್ತು ಪಾಕ್ ಧ್ವಜ ತಯಾರಿಸಲು ಬಳಸಿರುವ ಇತರೆ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.