ಉತ್ತರಪ್ರದೇಶ: ಏಕಾಏಕಿ ಮನೆಗೆ ನುಗ್ಗಿದ ಅಪರಿಚಿತ ದುಷ್ಕರ್ಮಿಗಳು ಒಂದೇ ಕುಟುಂಬದ ಮೂವರನ್ನು ಗುಂಡಿಕ್ಕಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಉತ್ತರಪ್ರದೇಶದ ಕಾಸ್ ಗಂಜ್ನ ಕೊಟ್ವಾಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ವ್ಯಕ್ತಿಗಳ ಗುರುತು ಇನ್ನೂ ಪತ್ತೆಯಾಗಿಲ್ಲ. ಆದರೆ ಮೃತರು ಒಂದೇ ಕುಟುಂಬದವರು ಎಂದು ಪೊಲೀಸರು ಖಚಿತಪಡಿಸಿದ್ದಾರೆ. ಮೂಲಗಳ ಪ್ರಕಾರ, ನಿನ್ನೆ ಸಂಜೆ ಇದ್ದಕ್ಕಿದ್ದಂತೆ ಮನೆಗೆ ನುಗ್ಗಿದ ಕೆಲ ಅಪರಿಚಿತರು, ಕುಟುಂಬದ ಸದಸ್ಯರೊಂದಿಗೆ ವಾಗ್ವಾದ ನಡೆಸಿದ್ದಾರೆ. ಈ ವೇಳೆ ನಾಲ್ಕು ಜನರ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ.
ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಗಂಭೀರವಾಗಿತ್ತು. ಗುಂಡೇಟಿನ ಶಬ್ದ ಕೇಳಿದ ಸ್ಥಳೀಯರು ಸ್ಥಳಕ್ಕೆ ಧಾವಿಸಿ, ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ತಕ್ಷಣ ಹತ್ತಿರದ ಆಸ್ಪತ್ರೆಗೆ ಸಾಗಿಸಿದ್ದಾರೆ. ಹಳೇ ದ್ವೇಷದ ಹಿನ್ನೆಲೆ ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಈ ಸಂಬಂಧ ಕಾಸ್ ಗಂಜ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಆರಂಭಿಸಿದ್ದಾರೆ.