ಹೈದರಾಬಾದ್: ಪೌರತ್ವ (ತಿದ್ದುಪಡಿ) ಕಾಯ್ದೆಯ ವಿರುದ್ಧ ಸುಳ್ಳು ಮಾಹಿತಿ ಹರಡಲಾಗುತ್ತಿದೆ ಎಂದು ಮೂರು ರೀತಿಯ ಸಾಮಾಜಿಕ ಮಾಧ್ಯಮಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
2019 ರಲ್ಲಿ ಸಿಎಎ ಜಾರಿಗೆ ಬಂದ ನಂತರ, ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಕೆಲವು ಸಮಾಜ ವಿರೋಧಿ ಶಕ್ತಿಗಳು ಕಾಯ್ದೆಯ ವಿರುದ್ಧ ಸಾಮಾಜಿಕ ಮಾಧ್ಯಮ ಅಭಿಯಾನವನ್ನು ಪ್ರಾರಂಭಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಕಾನೂನುಬಾಹಿರ, ಜನಸಾಮಾನ್ಯರನ್ನು ಪ್ರಚೋದಿಸಲು ಸಾಮಾಜಿಕ ಮಾಧ್ಯಮ ವೇದಿಕೆ ಆಗುತ್ತಿದೆ ಎಂದು ದೂರಲಾಗಿತ್ತು.
ಈ ರೀತಿಯ ಸಾಮಾಜಿಕ ಜಾಲತಾಣಗಳ ವೇದಿಕೆಗಳು ಉದ್ದೇಶಪೂರ್ವಕವಾಗಿ ಆಕ್ಷೇಪಾರ್ಹ ವಿಡಿಯೊಗಳನ್ನು ಪ್ರಸಾರ ಮಾಡುತ್ತಿವೆ. ಈ ಮೂಲಕ ರಾಷ್ಟ್ರೀಯ ಏಕೀಕರಣ ಮತ್ತು ಕೋಮು ಸೌಹಾರ್ದತೆಗೆ ಧಕ್ಕೆ ಉಂಟುಮಾಡುತ್ತಿವೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಮೈಕ್ರೋಬ್ಲಾಗಿಂಗ್ ಸೈಟ್, ಮೊಬೈಲ್ ಮೆಸೇಜಿಂಗ್ ಮತ್ತು ವಿಡಿಯೊ ಹಂಚಿಕೆ ಅಪ್ಲಿಕೇಶನ್‌ಗಳಲ್ಲಿ ಈ ರೀತಿ ಆಕ್ಷೇಪಾರ್ಹ ಪೋಸ್ಟ್ಗಳನ್ನು ಹಾಕಲಾಗುತ್ತಿದೆ ಎಂದು ದೂರಲಾಗಿದೆ.
ನ್ಯಾಯಾಲಯವು ಈ ದೂರು ಆಧರಿಸಿ ಪೊಲೀಸರಿಗೆ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಸೂಚಿಸಿದ್ದು, ಪೊಲೀಸರು ಐಪಿಸಿ ಸೆಕ್ಷನ್‌ಗಳ 153-ಎ (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 121 ಎ (ಭಾರತದ ವಿರುದ್ಧ ಘರ್ಷಣೆಗೆ ಸಂಚು) ಮತ್ತು ಇತರೆ ಸೆಕ್ಷನ್‌ಗಳ ಅಡಿಯಲ್ಲಿ ದೂರು ದಾಖಲು ಮಾಡಿಕೊಂಡಿದ್ದಾರೆ.
ಸೈಬರ್ ಅಪರಾಧ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಆಯುಕ್ತ ಕೆ.ವಿ.ಎಂ ಪ್ರಸಾದ್ ಈ ಬಗ್ಗೆ ಮಾಹಿತಿ ನೀಡಿದ್ದು, ಕಾನೂನಿನ ಸಹಕಾರ ಪಡೆದು ಮುಂದುವರಿಯಲಾಗುವುದು ಎಂದು ತಿಳಿಸಿದ್ದಾರೆ.