ಜಮ್ಮು ಮತ್ತು ಕಾಶ್ಮೀರ: ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್‌ನಲ್ಲಿ ಪ್ರಯಾಣಿಸುತ್ತಿದ್ದ 3-4 ಜನರ ಉಗ್ರರ ತಂಡವೊಂದು ಟೋಲ್ನಲ್ಲಿ ತಪಾಸಣೆ ಮಾಡುತ್ತಿದ್ದ ಪೊಲೀಸ್ ತಂಡದ ಮೇಲೆ ಗುಂಡು ಹಾರಿಸಿದೆ. ಈ ವೇಳೆ ಪೊಲೀಸರು ಪ್ರತಿದಾಳಿ ನಡೆಸಿದ್ದಾರೆ. ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಹತರಾಗಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮುಂಜಾನೆ 5 ಗಂಟೆ ಸುಮಾರಿಗೆ ನಗ್ರೋಟಾದ ಟೋಲ್ ಪ್ಲಾಜಾ ಬಳಿ ವಾಹನಗಳ ತಪಾಸಣೆ ನಡೆಸುತ್ತಿದ್ದ ವೇಳೆ ಶ್ರೀನಗರದಿಂದ ಬಂದ ಟ್ರಕ್ ಅನ್ನು ಪೊಲೀಸ್ ತಂಡ ತಡೆದು ನಿಲ್ಲಿಸಿದೆ. ಈ ವೇಳೆ ಉಗ್ರರು ಪೊಲೀಸರ ಮೇಲೆ ಏಕಾಏಕಿ ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಯೊಬ್ಬರಿಗೆ ಗಾಯವಾಗಿದೆ. ಟ್ರಕ್‌ನಲ್ಲಿ 3-4 ಉಗ್ರರು ಪ್ರಯಾಣಿಸುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸರು ಪ್ರತಿದಾಳಿ ನಡೆಸಿದಾಗ 3 ಉಗ್ರರು ಹತರಾಗಿದ್ದು, ಇನ್ನೊಬ್ಬ ಉಗ್ರ ಪಕ್ಕದ ಅರಣ್ಯ ಪ್ರದೇಶಕ್ಕೆ ಓಡಿ ಹೋಗಿ ಪರಾರಿಯಾಗಿದ್ದಾನೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ದಿಲ್‌ಬಾಗ್ ಸಿಂಗ್ ತಿಳಿಸಿದ್ದಾರೆ.
ಸ್ಥಳದಿಂದ ಪರಾರಿಯಾದ ಭಯೋತ್ಪಾದಕನನ್ನು ಪತ್ತೆ ಹಚ್ಚಲು ಶೋಧ ನಡೆಯುತ್ತಿದ್ದು, ಕೂಂಬಿಂಗ್ ಕಾರ್ಯಾಚರಣೆಯ ಮೇಲ್ವಿಚಾರಣೆಯನ್ನು ಹಿರಿಯ ಪೊಲೀಸ್ ಅಧಿಕಾರಿಗಳು ನೋಡಿಕೊಳ್ಳುತ್ತಿದ್ದಾರೆ.