ನವದೆಹಲಿ: ಕಳೆದೆರಡು ತಿಂಗಳಿಗೆ ಹೋಲಿಸಿದರೆ ನಿನ್ನೆ ಪತ್ತೆಯಾಗಿರುವ ಹೊಸ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆ ಇದೆ. ಇತ್ತ ಸಾವಿನ ಪ್ರಮಾಣದಲ್ಲೂ ಇಳಿಕೆ ಹಾಗೂ ಚೇತರಿಕೆಯ ಪ್ರಮಾಣದಲ್ಲಿ ಏರಿಕೆ ಕಂಡು ಬರುತ್ತಿದ್ದು, ಭಾರತದ ಕೋವಿಡ್ ವಿರುದ್ಧದ ಹೋರಾಟಕ್ಕೆ ಪುಷ್ಠಿ ಸಿಕ್ಕಂತಾಗುತ್ತಿದೆ.
ಕಳೆದ 24 ಗಂಟೆಗಳಲ್ಲಿ 61,267 ಸೋಂಕಿತರು ಪತ್ತೆಯಾಗಿದ್ದು, 884 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 66,85,083 ಹಾಗೂ ಮೃತರ ಸಂಖ್ಯೆ 1,03,569ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕಿತರ ಪೈಕಿ 56,62,491 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಉಳಿದಂತೆ 9,19,023 ಕೇಸ್ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಅಕ್ಟೋಬರ್ 5ರವರೆಗೆ 8 ಕೋಟಿಗೂ ಅಧಿಕ (8,10,71,797) ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ನಿನ್ನೆ ಒಂದೇ ದಿನ 10,89,403 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.