ನೋಯ್ಡಾ: ಗಣರಾಜ್ಯೋತ್ಸವದಂದು ದೆಹಲಿಯಲ್ಲಿ ರೈತರ ಟ್ರ್ಯಾಕ್ಟರ್ ಪರೇಡ್ ನಡೆದ ಹಿಂಸಾತ್ಮಕ ಪ್ರತಿಭಟನೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಕ್ಕೆ ಕಾಂಗ್ರೆಸ್ ಸಂಸದ ಶಶಿ ತರೂರ್ ಮತ್ತು ಆರು ಜನ ಪತ್ರಕರ್ತರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಿದೆ.
ರಾಷ್ಟ್ರ ರಾಜಧಾನಿಯಲ್ಲಿ ರೈತರು ನಡೆಸಿದ ಟ್ರ್ಯಾಕ್ಟರ್ ಪರೇಡ್ ಸಂದರ್ಭದಲ್ಲಿ ನಡೆದ ಹಿಂಸಾಚಾರಕ್ಕೆ ಸೋಷಿಯಲ್ ಮೀಡಿಯಾ ಪೋಸ್ಟ್ ಕಾರಣವೆಂದು ಆರೋಪಿಸಿ ವ್ಯಕ್ತಿಯೊಬ್ಬರು ನೀಡಿದ ದೂರಿನ ಹಿನ್ನೆಲೆ ಎಫ್‌ಐಆರ್ ದಾಖಲಾಗಿದೆ. ಪತ್ರಕರ್ತರಾದ ಮೃಣಾಲ್ ಪಾಂಡೆ, ರಾಜ್‌ದೀಪ್ ಸರ್ದೇಸಾಯಿ, ವಿನೋದ್ ಜೋಸ್, ಜಾಫರ್ ಆಘಾ, ಪರೇಶ್ ನಾಥ್ ಮತ್ತು ಅನಂತ್ ನಾಥ್ ವಿರುದ್ಧವೂ ಎಫ್‌ಐಆರ್ ದಾಖಲಿಸಲಾಗಿದೆ. ಅಲ್ಲದೆ ಎಫ್‌ಐಆರ್‌ನಲ್ಲಿ ಅಪರಿಚಿತ ವ್ಯಕ್ತಿಯನ್ನೂ ಹೆಸರಿಸಲಾಗಿದೆ.
ಭಾರತೀಯ ದಂಡ ಸಂಹಿತೆ ಸೆಕ್ಷನ್ 124 ಎ (ದೇಶದ್ರೋಹ), 295 ಎ, 504 ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯೂ ಪ್ರಕರಣ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.