ಜೈಪುರ (ರಾಜಸ್ಥಾನ): ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ತಮ್ಮ ಸರ್ಕಾರವು ತನ್ನ ಅವಧಿಯನ್ನು ಪೂರ್ಣಗೊಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಚಿಹ್ನೆಯ ಆಧಾರದ ಮೇಲೆ ಆಯ್ಕೆಯಾಗಿರುವ ಎಲ್ಲ ಶಾಸಕರು ವಿಧಾನಸಭಾ ಅಧಿವೇಶನಕ್ಕೆ ಹಾಜರಾಗಬೇಕು ಎಂದು ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಗೆಹ್ಲೋಟ್, ರಾಜಸ್ಥಾನ ರಾಜಕೀಯ ಬಿಕ್ಕಟ್ಟಿನ ಬಗ್ಗೆ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಅವರ ಹೇಳಿಕೆಯನ್ನು ಖಂಡಿಸಿದ್ದು, ರಾಜ್ಯದಲ್ಲಿ ಪ್ರಜಾಸತ್ತಾತ್ಮಕವಾಗಿ ಚುನಾಯಿತವಾದ ಸರ್ಕಾರವನ್ನು ಉರುಳಿಸಲು ಬಿಜೆಪಿ ಸಂಚು ರೂಪಿಸುತ್ತಿದೆ ಎಂದು ಆರೋಪಿಸಿದರು.
ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಅಧಿವೇಶನಕ್ಕೆ ಬಂಡಾಯ ಶಾಸಕರು ಹಾಜರಾಗಬೇಕು ಎಂದು ಹೇಳಿದ ಅವರು ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಅವರನ್ನು ಬೆಂಬಲಿಸುವ ಶಾಸಕರು ಬಿಜೆಪಿಯ ಮಡಿಲಿನಲ್ಲಿ ಆಟವಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಕುದುರೆ ವ್ಯಾಪಾರ ನಡೆದಿರುವುದು ಎಲ್ಲರಿಗೂ ತಿಳಿದಿದೆ, ಆದರೆ, ಅದು ನಮ್ಮ ಮೇಲೆ ಪರಿಣಾಮ ಬೀರುವುದಿಲ್ಲ, ನಾವು ನಮ್ಮ ಸರ್ಕಾರದ ಅವಧಿಯನ್ನು ಪೂರ್ಣಗೊಳಿಸುತ್ತೇವೆ ಎಂದು ಇದೇ ವೇಳೆ ಅಚಲ ವಿಶ್ವಾಸ ವ್ಯಕ್ತಪಡಿಸಿದರು.