ಲಖನೌ: ರಾಮ ಮಂದಿರ ಶಿಲಾನ್ಯಾಸದ ಭೂಮಿ ಪೂಜೆಯ ಸಿದ್ಧತೆಗಳನ್ನು ಪರಿಶೀಲಿಸಲು ಇಂದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಾಮ ಜನ್ಮಭೂಮಿ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ.
ಆಗಸ್ಟ್ 5ರಂದು ಪ್ರಧಾನಿ ನರೇಂದ್ರ ಮೋದಿ ಭೂಮಿ ಪೂಜೆ ಕಾರ್ಯ ನೆರವೇರಿಸುವ ಸಾಧ್ಯತೆಯಿದೆ ಎಂದು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಅಧ್ಯಕ್ಷ ಮಹಂತ್ ನೃತ್ಯ ಗೋಪಾಲ್ ದಾಸ್ ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಹಲವು ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕೂಡ ಭಾಗವಹಿಸುವ ಸಾಧ್ಯತೆಯಿದೆ. ಭೂಮಿ ಪೂಜೆ ಬಳಿಕ ದೇವಾಲಯದ ನಿರ್ಮಾಣ ಕಾರ್ಯ ಪ್ರಾರಂಭವಾಗಲಿದೆ.
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಟ್ರಸ್ಟ್ವೊಂದನ್ನು ರಚಿಸುವುದಾಗಿ ಫೆಬ್ರವರಿ 5ರಂದು ಪಿಎಂ ಮೋದಿ ಘೋಷಿಸಿದ್ದರು. ಬಳಿಕ ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ 15 ಸದಸ್ಯರ 'ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್' ಸ್ಥಾಪಿಸಲಾಯಿತು. ದೇವಾಲಯದ ನಿರ್ಮಾಣದ ಮೇಲ್ವಿಚಾರಣೆಯನ್ನು ಈ ಟ್ರಸ್ಟ್ ನೋಡಿಕೊಳ್ಳುತ್ತಿದೆ.