ಆಗ್ರಾ (ಉತ್ತರ ಪ್ರದೇಶ): ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ವಕೀಲರನ್ನು ಗುಂಡಿಕ್ಕಿ ಕೊಲೆಗೈದ ಘಟನೆ ಆಗ್ರಾದ ತಾಜ್‌ನಗರಿ ಪೊಲೀಸ್ ಠಾಣಾ ವ್ಯಾಪ್ತಿಯ ಶಾಹೀದ್ ನಗರ ಪ್ರದೇಶದಲ್ಲಿ ನಡೆದಿದೆ.
ವಕೀಲ ಹರೀಶ್ ಪಚೌರಿ ಮೃತರು. ಹರೀಶ್ ಹೊರಗಡೆ ಹೋಗುತ್ತಿದ್ದ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಆತನನ್ನು ಬೆನ್ನಟ್ಟಿದ್ದಾರೆ. ಬಳಿಕ ಮೂರು-ನಾಲ್ಕು ಬಾರಿ ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ತಕ್ಷಣ, ಸ್ಥಳೀಯರು ಹರೀಶ್ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅದಾಗಲೇ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮಾಹಿತಿ ಪಡೆದ ಆಗ್ರಾ ಪೊಲೀಸರು ಅಪರಾಧ ತಂಡದೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹಣ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ದುಷ್ಕರ್ಮಿಗಳು ಕಿತ್ತುಕೊಳ್ಳಲು ಹೀಗೆ ಮಾಡಿರಬಹುದು ಅಥವಾ ಈ ಹತ್ಯೆಯು ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ನಡೆದಿರಬಹುದು ಎಂದು ಶಂಕಿಸಲಾಗಿದೆ. ಆರೋಪಿಗಳನ್ನು ಪತ್ತೆ ಹಚ್ಚಲು ಪೊಲೀಸರು ಸಿಸಿಟಿವಿ ಮೊರೆಹೋಗಿದ್ದಾರೆ.