ಲಖನೌ (ಉತ್ತರ ಪ್ರದೇಶ): ದಲಿತ ಯುವತಿ ಮೇಲಿನ ಅತ್ಯಾಚಾರ ಮತ್ತು ಸಾವು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ ನೀಡಿದ ಸಮಯವನ್ನು 10 ದಿನಗಳವರೆಗೆ ವಿಸ್ತರಿಸಲಾಗಿದೆ ಎಂದು ಉತ್ತರ ಪ್ರದೇಶ ಸರ್ಕಾರ ತಿಳಿಸಿದೆ.
ಎಸ್‌ಐಟಿ ಇಂದು ಮುಖ್ಯಮಂತ್ರಿಗೆ ವರದಿ ಸಲ್ಲಿಸಬೇಕಿತ್ತು. ಆದರೆ, ಸಿಎಂ ಆದೇಶದ ಮೇರೆಗೆ ತಂಡದ ತನಿಖೆಯ ವ್ಯಾಪ್ತಿಯನ್ನು ವಿಸ್ತರಿಸಲಾಗಿದೆ ಎಂದು ಗೃಹ ಇಲಾಖೆಯ ರಾಜ್ಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವನಿಶ್.ಕೆ ಅವಸ್ಥಿ ಹೇಳಿದ್ದಾರೆ.
ಕುಟುಂಬ ಸದಸ್ಯರ ಹೇಳಿಕೆಗಳನ್ನು ದಾಖಲಿಸಲು ಎಸ್‌ಐಟಿ ಭಾನುವಾರ ಬೆಳಗ್ಗೆ ಸಂತ್ರಸ್ತೆಯ ನಿವಾಸಕ್ಕೆ ತೆರಳಿತ್ತು.
ಮೊದಲ ವರದಿಯ ಆಧಾರದ ಮೇಲೆ, ಮುಖ್ಯಮಂತ್ರಿಗಳು ಈಗಾಗಲೇ ಹಥ್ರಾಸ್ ಪೊಲೀಸ್ ವರಿಷ್ಠಾಧಿಕಾರಿ, ಡಿಎಸ್ಪಿ ಮತ್ತು ಇತರ ಕೆಲವು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದಾರೆ.
ಈ ಮಧ್ಯೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಕರಣದ ತನಿಖೆಯನ್ನು ಸಿಬಿಐಗೆ ಶಿಫಾರಸು ಮಾಡಿದ್ದಾರೆ. ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 19 ವರ್ಷದ ಯುವತಿ ಸೆ.29 ರಂದು ದೆಹಲಿಯ ಸಫ್ತಾರ್ಜಂಗ್ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಳು. ಪ್ರಕರಣದ ತನಿಖೆಗೆ ಎಸ್‌ಐಟಿ ರಚನೆ ಮಾಡಿದ್ದ ಯೋಗಿ ಆದಿತ್ಯನಾಥ್, ಈ ಹಿಂದೆ 7 ದಿನದಲ್ಲಿ ವರದಿ ಸಲ್ಲಿಸುವಂತೆ ಆದೇಶಿಸಿದ್ದರು.