ನವದೆಹಲಿ: ಮಹಾನಗರ ಪಾಲಿಕೆ ಸೇರಿದಂತೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಅಂಗವಾಗಿ ನಾವು ಹೊಂದಿದ್ದ ಎಲ್ಲಾ ಹುದ್ದೆಗಳನ್ನು ಬಿಟ್ಟು ಕೊಡುತ್ತೇವೆ ಎಂದು ದೆಹಲಿ ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಅಧ್ಯಕ್ಷ ಹರ್ಮೀತ್ ಸಿಂಗ್ ಕಲ್ಕಾ ಹೇಳಿದ್ದಾರೆ.
ಕೆಂದ್ರ ಸರ್ಕಾರದ ಮೂರು ಕೃಷಿ ಮಸೂದೆಗಳನ್ನು ವಿರೋಧಿಸಿ ಶಿರೋಮಣಿ ಅಕಾಲಿ ದಳ ಈ ನಿರ್ಧಾರ ಕೈಗೊಂಡಿದೆ.
"ದೆಹಲಿಯ ಪುರಸಭೆ ನಿಗಮಗಳು ಸೇರಿದಂತೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಭಾಗವಾಗಿ ನಾವು ಹೊಂದಿದ್ದ ಎಲ್ಲಾ ಹುದ್ದೆಗಳನ್ನು ತ್ಯಜಿಸಲು ನಾವು ನಿರ್ಧರಿಸಿದ್ದೇವೆ" ಎಂದು ಕಲ್ಕಾ ಹೇಳಿದರು.
ಶನಿವಾರ ರಾತ್ರಿ ನಡೆದ ಸಭೆಯಲ್ಲಿ ಅಕಾಲಿ ದಳ ಈ ನಿರ್ಧಾರ ತೆಗೆದುಕೊಂಡಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎಯಿಂದ ಹೊರಗುಳಿಯಲು ಸರ್ವಾನುಮತದಿಂದ ತೀರ್ಮಾನಿಸಿದೆ.
ಸಭೆಯ ಅಧ್ಯಕ್ಷತೆಯನ್ನು ಅಕಾಲಿ ದಳದ ಅಧ್ಯಕ್ಷ ಸುಖ್ಬೀರ್ ಸಿಂಗ್ ಬಾದಲ್ ವಹಿಸಿದ್ದರು. ಮೂರು ಗಂಟೆಗಳ ಕಾಲ ನಡೆದ ಸಭೆಯ ಕೊನೆಯಲ್ಲಿ ಎನ್‌ಡಿಎ ತೊರೆಯುವ ನಿರ್ಧಾರ ಕೈಗೊಳ್ಳಲಾಯಿತು.
ಇತ್ತೀಚೆಗೆ ಮುಕ್ತಾಯಗೊಂಡ ಮಾನ್ಸೂನ್ ಅಧಿವೇಶನದಲ್ಲಿ ಸಂಸತ್ತು ಅಂಗೀಕರಿಸಿದ ಮೂರು ಕೃಷಿ ಮಸೂದೆಗಳಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾನುವಾರ ತಮ್ಮ ಒಪ್ಪಿಗೆ ನೀಡಿದ್ದಾರೆ.
ರೈತರ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ 2020, ರೈತರ (ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಸೇವಾ ಕಾಯ್ದೆ 2020 ಮತ್ತು ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆ 2020 ಈ ಮೂರು ಕೃಷಿ ಕ್ಷೇತ್ರ ಸುಧಾರಣಾ ಕಾಯ್ದೆಗಳಾಗಿವೆ.