ಜಮ್ಮು: ಪಾಕಿಸ್ತಾನವು ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಮತ್ತೆ ಕದನ ವಿರಾಮ ಉಲ್ಲಂಘಿಸಿದ್ದು, ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ.
"ಇಂದು ಮುಂಜಾನೆ 1.30ರ ಸುಮಾರಿಗೆ ಪಾಕಿಸ್ತಾನವು ಪೂಂಚ್ ಜಿಲ್ಲೆಯ ಮಂಕೋಟೆ ಸೆಕ್ಟರ್‌ನಲ್ಲಿನ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ತೀವ್ರವಾದ ಶೆಲ್ ದಾಳಿ ಮಾಡುವ ಮೂಲಕ ಕದನ ವಿರಾಮ ಉಲ್ಲಂಘಿಸಿದೆ" ಎಂದು ರಕ್ಷಣಾ ಸಚಿವಾಲಯದ ವಕ್ತಾರ ಕರ್ನಲ್ ದೇವೇಂದರ್ ಆನಂದ್ ತಿಳಿಸಿದ್ದಾರೆ. ಭಾರತೀಯ ಸೇನೆ ತಕ್ಕ ಉತ್ತರ ನೀಡಿದೆ ಎಂದು ಅವರು ಹೇಳಿದ್ದಾರೆ.
ಪೂಂಚ್ ಜಿಲ್ಲೆಯ ಎಲ್‌ಒಸಿ ಬಳಿ ನಾಗರಿಕ ಪ್ರದೇಶಗಳಿಗೆ ಪಾಕಿಸ್ತಾನ ಶೆಲ್ ದಾಳಿ ನಡೆಸಿದ ಪರಿಣಾಮ 40 ವರ್ಷದ ಮಹಿಳೆ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಎಲ್‌ಒಸಿಯಲ್ಲಿ ಇದುವರೆಗೆ 3,190ಕ್ಕೂ ಹೆಚ್ಚು ಬಾರಿ ಕದನ ವಿರಾಮ ಉಲ್ಲಂಘನೆಯಾಗಿದ್ದು, ಈ ವರ್ಷ 24 ನಾಗರಿಕರು ಸಾವನ್ನಪ್ಪಿ 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.