ಗಾಂಧಿನಗರ (ಗುಜರಾತ್): ನಿನ್ನೆಯಷ್ಟೇ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾದ ಭೂಪೇಂದ್ರ ಪಟೇಲ್ (59) ಅವರು ಗುಜರಾತ್ನ 17ನೇ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಇಂದು ಮಧ್ಯಾಹ್ನ 2.20ಕ್ಕೆ ಗಾಂಧಿನಗರದಲ್ಲಿ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರ ಸಮ್ಮುಖದಲ್ಲಿ ಭೂಪೇಂದ್ರ ಪಟೇಲ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಪಟೇಲ್ ಮಾತ್ರ ಪ್ರಮಾಣವಚನ ಸ್ವೀಕರಿಸಲಿದ್ದು, ನೂತನ ಗುಜರಾತ್ ಸಂಪುಟ ರಚನೆ ಬಗ್ಗೆ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ. ಇನ್ನು ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಪಾಲ್ಗೊಳ್ಳುವ ನಿರೀಕ್ಷೆಯಿದೆ.
ಇದನ್ನೂ ಓದಿ: ಗುಜರಾತ್ ಸಿಎಂ ಸ್ಥಾನಕ್ಕೆ ಭೂಪೇಂದ್ರ ಪಟೇಲ್ ಅಚ್ಚರಿಯ ಆಯ್ಕೆ: ಯಾರಿವರು? ಆಯ್ಕೆಯ ಹಿಂದಿನ ಲೆಕ್ಕಾಚಾರಗಳೇನು?
ಮುಂದಿನ ವರ್ಷ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೊನ್ನೆ ಶನಿವಾರ ವಿಜಯ್ ರೂಪಾನಿ ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರ ಬೆನ್ನಲ್ಲೆ ನಿನ್ನೆ ಗಾಂಧಿನಗರಕ್ಕೆ ಆಗಮಿಸಿದ್ದ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಮತ್ತು ನರೇಂದ್ರ ಸಿಂಗ್ ತೋಮರ್, ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಅವರು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸಿ ಭೂಪೇಂದ್ರ ಪಟೇಲ್ ಅವರನ್ನು ನೂತನ ಸಿಎಂ ಆಗಿ ಆಯ್ಕೆ ಮಾಡಿದ್ದರು.
ಇದೇ ಮೊದಲ ಬಾರಿಗೆ ಘಾಠಲೋಡಿಯಾ ಕ್ಷೇತ್ರದಿಂದ ಶಾಸಕರಾಗಿದ್ದ ಭೂಪೇಂದ್ರ ಪಟೇಲ್ ಅವರನ್ನು ಸಿಎಂ ಆಗಿ ಆಯ್ಕೆ ಮಾಡಿದ್ದು ಎಲ್ಲರಲ್ಲೂ ಅಚ್ಚರಿ ಉಂಟುಮಾಡಿದೆ. ಸಿಎಂ ರೇಸ್ನಲ್ಲಿದ್ದವರಲ್ಲಿ ಇವರ ಹೆಸರು ಕೂಡ ಕೇಳಿ ಬಂದಿರಲಿಲ್ಲ.