ಜಲ್ಪೈಗುರಿ (ಪಶ್ಚಿಮ ಬಂಗಾಳ) : ನಿನ್ನೆ ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯಲ್ಲಿ ನಡೆದ ಗುವಾಹಟಿ-ಬಿಕಾನೇರ್ ಎಕ್ಸ್‌ಪ್ರೆಸ್ ರೈಲು ಅಪಘಾತದಲ್ಲಿ 9 ಮಂದಿ ಮೃತಪಟ್ಟಿದ್ದಾರೆ. ಈ ಘಟನಾ ಸ್ಥಳಕ್ಕೆ ಇಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಇದೇ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಅಪಘಾತಕ್ಕೆ ಇಂಜಿನ್ನಲ್ಲಿನ ದೋಷವೇ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಘಟನೆಗೆ ಮೂಲ ಕಾರಣವನ್ನು ಕಂಡುಹಿಡಿಯಲು ಶಾಸನಬದ್ಧ ವಿಚಾರಣೆಯನ್ನು ಪ್ರಾರಂಭಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ ಮತ್ತು ನಾನು ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದರು.
ಗುವಾಹಟಿ-ಬಿಕಾನೇರ್ ನಡುವೆ ಸಂಚರಿಸುತ್ತಿದ್ದ ಎಕ್ಸ್‌ಪ್ರೆಸ್ ರೈಲು ನಿನ್ನೆ ಜಲ್ಪೈಗುರಿ ಜಿಲ್ಲೆಯ ದೊಮೊಹಾನಿ ಬಳಿ ಹಳಿ ತಪ್ಪಿದ ಪರಿಣಾಮ ಬೋಗಿಗಳು ಚೆಲ್ಲಾಪಿಲ್ಲಿಯಾಗಿದ್ದವು. ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. 42ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಇದನ್ನೂ ಓದಿ: ಗುವಾಹಟಿ-ಬಿಕನೇರ್ ರೈಲು ದುರಂತ: 9 ಮಂದಿ ಸಾವು,42ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ
ಮೃತಪಟ್ಟವರಿಗೆ ತಲಾ 5 ಲಕ್ಷ ರೂ., ಗಂಭೀರವಾಗಿ ಗಾಯಗೊಂಡಿರುವರಿಗೆ 1 ಲಕ್ಷ ಹಾಗೂ ಸಣ್ಣಪುಟ್ಟ ಗಾಯಗಳಾಗಿರುವವರಿಗೆ 25 ಸಾವಿರ ರೂ. ಪರಿಹಾರ ನೀಡುವುದಾಗಿ ಕೇಂದ್ರ ರೈಲ್ವೆ ಇಲಾಖೆ ಘೋಷಿಸಿದೆ.