ನವದೆಹಲಿ: ಬೆಳಗಾವಿ ಜಿಲ್ಲೆಯ ವಂಟಮುರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿ, ಕಂಬಕ್ಕೆ ಕಟ್ಟಿ ಥಳಿಸಿದ ಅಮಾನವೀಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ವರದಿ ಸಲ್ಲಿಸಲು ಬಿಜೆಪಿ ಇಂದು 5 ಸದಸ್ಯರ ಸತ್ಯಶೋಧನಾ ಸಮಿತಿ ರಚಿಸಿದೆ.
ಮಹಿಳೆಯನ್ನು ಅಮಾನುಷವಾಗಿ ನಡೆಸಿಕೊಂಡ ಘಟನೆಯನ್ನು ಖಂಡಿಸಿರುವ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಈ ಸಮಿತಿ ರಚಿಸಿದ್ದಾರೆ. ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಸತ್ಯಶೋಧನೆ ನಡೆಸಿ ವರದಿ ಸಲ್ಲಿಸುವಂತೆ ಅವರು ಸೂಚಿಸಿದ್ದಾರೆ. ಸಂಸದರಾದ ಅಪ್ರಜಿತಾ ಸಾರಂಗಿ, ಸುನೀತಾ ದುಗ್ಗಲ್, ಲಾಕೆಟ್ ಚಟರ್ಜಿ, ರಂಜಿತಾ ಕೋಲಿ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಆಶಾ ಲಾಕ್ರಾ ಸಮಿತಿಯ ಸದಸ್ಯರಾಗಿದ್ದಾರೆ.
ಘಟನೆಯ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ನಡ್ಡಾ, "ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದಲೂ ಇಂತಹ ಘೋರ ಅಪರಾಧಗಳು ನಡೆಯುತ್ತಿವೆ. ವಿಶೇಷವಾಗಿ ಮಹಿಳೆಯರ ವಿರುದ್ಧ ಇಂತಹ ಘಟನೆಗಳು ವರದಿಯಾಗುತ್ತಿವೆ. ಅಪರಾಧಗಳನ್ನು ನಿಭಾಯಿಸುವಲ್ಲಿ ದೇಶದೆಲ್ಲೆಡೆ ಕಾಂಗ್ರೆಸ್ ಸೋತಿದೆ. ಕಾಂಗ್ರೆಸ್ ಸರ್ಕಾರಗಳ ಬೇಜವಾಬ್ದಾರಿ ವರ್ತನೆಯನ್ನು ಇದು ಬಹಿರಂಗಪಡಿಸುತ್ತದೆ" ಎಂದು ಟೀಕಿಸಿದ್ದಾರೆ.
ಸಂಸತ್ ಮುಂದೆ ಪ್ರತಿಭಟನೆ: ಈ ಘಟನೆಯನ್ನು ಖಂಡಿಸಿ ಕರ್ನಾಟಕದ ಬಿಜೆಪಿ ಸಂಸದರು ಇಂದು ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಸದಾನಂದ ಗೌಡ ಮಾತನಾಡಿ, "ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ವಿನಾಕಾರಣ ಮಹಿಳೆಯನ್ನು ವಿವಸ್ತ್ರಗೊಳಿಸಿ, ಮೆರವಣಿಗೆ ಮಾಡಿ, ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ರಾಜ್ಯದ ಎಸ್ಸಿ, ಎಸ್ಟಿ ಮಹಿಳೆಯರಿಗೆ ಭದ್ರತೆ ನೀಡುವಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ" ಎಂದು ವಾಗ್ದಾಳಿ ನಡೆಸಿದರು.
ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, "ಎಸ್ಸಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿರುವ ಘಟನೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ. ಹೆಚ್ಚುತ್ತಿರುವ ಇಂಥ ಅಪರಾಧ ಪ್ರಕರಣಗಳು, ಕಾನೂನು ಹಾಗೂ ಸುವ್ಯವಸ್ಥೆ ಹದಗೆಡುತ್ತಿರುವುದು ಮಾತ್ರವಲ್ಲದೆ ಅವುಗಳನ್ನು ತಡೆಗಟ್ಟಲು ಕಾಂಗ್ರೆಸ್ ಎಡವುತ್ತಿರುವುದನ್ನು ತೋರಿಸುತ್ತದೆ. ಅಸಹಾಯಕ ಕಾಂಗ್ರೆಸ್ ಆಡಳಿತದಲ್ಲಿ ಮಹಿಳೆಯರು ಸುರಕ್ಷಿತವಾಗಿಲ್ಲ. ನಮ್ಮ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರು 5 ಸದಸ್ಯರನ್ನೊಳಗೊಂಡ ಸತ್ಯಶೋಧನಾ ಸಮಿತಿಯನ್ನು ರಚಿಸಿದ್ದಾರೆ. ಈ ತಂಡ ಆದಷ್ಟು ಶೀಘ್ರದಲ್ಲಿ ಸ್ಥಳಕ್ಕೆ ಭೇಟಿ ನೀಡಿ, ವರದಿ ಸಲ್ಲಿಸಲಿದೆ" ಎಂದು ಹೇಳಿದ್ದಾರೆ.
ಏನಿದು ಘಟನೆ?: ಯುವಕನೋರ್ವ ಅದೇ ಗ್ರಾಮದ ಯುವತಿಯನ್ನು ಪ್ರೀತಿಸಿ ಊರಿನಿಂದ ಓಡಿಹೋದ ಕಾರಣಕ್ಕೆ ದುಷ್ಕರ್ಮಿಗಳು ಯುವಕನ ತಾಯಿಯನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿ, ನಂತರ ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿರುವ ಘಟನೆ ಡಿಸೆಂಬರ್ 11ರಂದು ನಡೆದಿತ್ತು. ಈ ಸಂಬಂಧ ಈಗಾಗಲೇ 8 ಮಂದಿಯನ್ನು ಪೊಲೀಸರು ಬಂಧಿಸಿದ್ದು, ತನಿಖೆ ನಡೆಯುತ್ತಿದೆ. ಕರ್ನಾಟಕ ಹೈಕೋರ್ಟ್ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದೆ.
ಇದನ್ನೂ ಓದಿ: ಮಗನ 'ಪ್ರೀತಿ', ತಾಯಿಗೆ ಶಿಕ್ಷೆ; ಬೆಳಗಾವಿಯಲ್ಲಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ