ಕೋಲ್ಕತ್ತಾ(ಪಶ್ಚಿಮ ಬಂಗಾಳ): ಅತ್ಯಂತ ಕುತೂಹಲ ಕೆರಳಿಸಿರುವ ಭವಾನಿಪುರ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯನ್ನು ಘೋಷಿಸಿದೆ. ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಬಿಜೆಪಿ ಹೈಕಮಾಂಡ್ ಪ್ರಿಯಾಂಕಾ ಟಿಬ್ರೆವಾಲ್ ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ.
ಸೆಪ್ಟೆಂಬರ್ 30ರಂದು ಉಪಚುನಾವಣೆ ನಡೆಯಲಿದ್ದು, ಅಕ್ಟೋಬರ್ 3ರಂದು ಫಲಿತಾಂಶ ಹೊರಬೀಳಲಿದೆ. ಬೈ ಎಲೆಕ್ಷನ್ನಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ ಅಭ್ಯರ್ಥಿಯನ್ನು ಹಾಕದಿರಲು ಕಾಂಗ್ರೆಸ್ ನಿರ್ಧರಿಸಿದೆ. ಮಮತಾ ಬ್ಯಾನರ್ಜಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.
ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ನಂದಿಗ್ರಾಮದಿಂದ ಸ್ಪರ್ಧಿಸಿದ್ದ ಮಮತಾ ಬ್ಯಾನರ್ಜಿ, ಸುವೇಂದು ಅಧಿಕಾರಿ ವಿರುದ್ಧ ಅಲ್ಪಮತಗಳ ಅಂತರದಲ್ಲಿ ಸೋತಿದ್ದರು. ಇದರಿಂದಾಗಿ ಮುಖ್ಯಮಂತ್ರಿ ಪಟ್ಟ ಉಳಿಸಿಕೊಳ್ಳಲು ಭವಾನಿಪುರ ಕ್ಷೇತ್ರದಲ್ಲಿ ಗೆಲುವು ಸಾಧಿಸುವುದು ಅನಿವಾರ್ಯವಾಗಿದೆ.
ಭವಾನಿಪುರ ಜೊತೆಗೆ ಸಂಶೆರ್ಗಂಜ್ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಮಿಲನ್ ಘೋಷ್ ಮತ್ತು ಜಂಗೀಪುರ ವಿಧಾನಸಭಾ ಕ್ಷೇತ್ರದಿಂದ ತನ್ನ ಅಭ್ಯರ್ಥಿಯನ್ನಾಗಿ ಸುಜಿತ್ ದಾಸ್ ಅವರ ಹೆಸರುಗಳನ್ನು ಬಿಜೆಪಿ ಘೋಷಣೆ ಮಾಡಿದೆ.
ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ನಡೆದ ಚುನಾವಣೆ ವೇಳೆ ಈ ಎರಡೂ ಕ್ಷೇತ್ರಗಳ ಅಭ್ಯರ್ಥಿಗಳು ನಿಧನರಾಗಿದ್ದ ಹಿನ್ನೆಲೆಯಲ್ಲಿ ಇಲ್ಲಿ ಉಪಚುನಾವಣೆ ನಡೆಯುತ್ತಿದೆ.
ಇದನ್ನೂ ಓದಿ ಬೈ ಎಲೆಕ್ಷನ್: ಭವಾನಿಪುರ ಕ್ಷೇತ್ರದಿಂದ ಸಿಎಂ ಮಮತಾ ಬ್ಯಾನರ್ಜಿ ನಾಮಿನೇಷನ್