ನವದೆಹಲಿ: 'ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ'ಯನ್ನು ವಿಸ್ತರಿಸಿದ್ದಕ್ಕಾಗಿ ಬಿಜೆಪಿ ಸಂಸದರು ಪ್ರಧಾನಿ ಮೋದಿಗೆ ಧನ್ಯವಾದ ಅರ್ಪಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಈ ವಾರದ ಆರಂಭದಲ್ಲಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯನ್ನು ಆರು ತಿಂಗಳವರೆಗೆ ವಿಸ್ತರಿಸಲು ನಿರ್ಧರಿಸಿತ್ತು.
ಈ ಯೋಜನೆಯು ದೇಶದ 80 ಕೋಟಿಗೂ ಹೆಚ್ಚು ಜನರಿಗೆ ಸಹಾಯ ಮಾಡುವ ಗುರಿ ಹೊಂದಿದೆ. ಮಾರ್ಚ್ 2020 ರಲ್ಲಿ ಪ್ರಾರಂಭವಾದ ಈ ಯೋಜನೆಯನ್ನು ನಂತರ ಮಾರ್ಚ್ 2022ಕ್ಕೆ ವಿಸ್ತರಿಸಲಾಯಿತು. ಈಗ ಮತ್ತೆ ಇನ್ನೂ 6 ತಿಂಗಳು ಅಂದರೆ ಸೆಪ್ಟೆಂಬರ್ 2022ರವರೆಗೆ ವಿಸ್ತರಿಸಿದ್ದಾರೆ.
ದೆಹಲಿಯ ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಇಂದು ಬಿಜೆಪಿ ಸಂಸದೀಯ ಪಕ್ಷದ ಸಭೆ ನಡೆಯಿತು. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಸಭೆಯಲ್ಲಿ ಪಾಲ್ಗೊಂಡಿದ್ದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಅರ್ಜುನ್ ರಾಮ್ ಮೇಘವಾಲ್, ದೆಹಲಿಯ ಅಂಬೇಡ್ಕರ್ ಅಂತರಾಷ್ಟ್ರೀಯ ಕೇಂದ್ರದಲ್ಲಿ ಸಭೆ ನಡೆಯಿತು. ಪಕ್ಷದ ರಾಷ್ಟ್ರೀಯ ಅಧ್ಯಕ್ಷ (ಜೆಪಿ ನಡ್ಡಾ) ಮತ್ತು ಪಿಎಂ ಮೋದಿ ಅವರು ಹೇಳಿದಂತೆ ಸಾಮಾಜಿಕ ನ್ಯಾಯದ ವಿಷಯದ ಕುರಿತು ಏಪ್ರಿಲ್ 6-14 ರ ನಡುವೆ ಸಭೆಗಳು ಮತ್ತು ಸಮಾವೇಶಗಳನ್ನು ನಡೆಸುವುದು ಇಂದಿನ ಸಭೆಯ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.
ಇದಕ್ಕೂ ಮುನ್ನ, ಬಿಜೆಪಿ ನಾಯಕರು ವಿಧಾನಸಭೆ ಚುನಾವಣೆಯ ಫಲಿತಾಂಶಗಳನ್ನು ವಿಶ್ಲೇಷಿಸಲು ಸಭೆ ನಡೆಸಿದರು. ಅದು ಈ ವರ್ಷದ ರಾಷ್ಟ್ರಪತಿ ಚುನಾವಣೆಯ ಮೇಲೆ ಪರಿಣಾಮ ಬೀರಲಿದೆ ಮತ್ತು ಮುಂದಿನ ಲೋಕಸಭೆ ಚುನಾವಣೆಗೆ ಪಕ್ಷದ ಸಿದ್ಧತೆಯ ದೃಷ್ಟಿಯಿಂದಲೂ ಮಹತ್ವದ್ದಾಗಿದೆ. ಬಿಜೆಪಿ ಗೆದ್ದ ನಾಲ್ಕು ರಾಜ್ಯಗಳ ಹಿರಿಯ ನಾಯಕರು ರಾಷ್ಟ್ರ ರಾಜಧಾನಿಯಲ್ಲಿ ಗೃಹ ಸಚಿವ ಅಮಿತ್ ಶಾ ಮತ್ತು ಪಕ್ಷದ ಮುಖ್ಯಸ್ಥ ಜೆಪಿ ನಡ್ಡಾ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿಎಲ್ ಸಂತೋಷ್ ಸೇರಿದಂತೆ ಪಕ್ಷದ ಕೇಂದ್ರ ನಾಯಕರೊಂದಿಗೆ ಚರ್ಚೆ ನಡೆಸಿದರು.
ಸರ್ಕಾರ ರಚನೆಯ ಹೊರತಾಗಿ, ಪಕ್ಷವು ಗೆದ್ದ ಮತ್ತು ಸೋತ ಸ್ಥಾನಗಳು ಮತ್ತು ಆಧಾರವಾಗಿರುವ ಕಾರಣಗಳು ಮತ್ತು ಅಂಶಗಳ ಮೇಲೆ ಕೇಂದ್ರೀಕರಿಸಿ, ಸಮೀಕ್ಷೆಯ ಫಲಿತಾಂಶಗಳ ವಿಶ್ಲೇಷಣೆಯನ್ನು ಸಹ ನಡೆಸಿತು ಎಂದು ಮೂಲಗಳು ತಿಳಿಸಿವೆ. ಉತ್ತರ ಪ್ರದೇಶ, ಉತ್ತರಾಖಂಡ, ಮಣಿಪುರ ಮತ್ತು ಗೋವಾ ವಿಧಾನಸಭೆ ಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಚುನಾವಣಾ ನಿರ್ಣಾಯಕ ಉತ್ತರ ಪ್ರದೇಶದಲ್ಲಿ 35 ವರ್ಷಗಳ ನಂತರ ಮೊದಲ ಬಾರಿಗೆ ಪಕ್ಷವೊಂದು ಮತ್ತೆ ಅಧಿಕಾರಕ್ಕೆ ಬಂದು ಇತಿಹಾಸ ಬರೆದಿದೆ.
ಇದನ್ನೂ ಓದಿ: ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ: 13 ಲಕ್ಷಕ್ಕೂ ಅಧಿಕ ಅಂಗನವಾಡಿ ಕಾರ್ಯಕರ್ತೆಯರಿಗೆ ಲಾಭ