ಅಸ್ಸೋಂ: ಬಸ್ ಮತ್ತು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿರುವ ಘಟನೆ ಅಸ್ಸೋಂನ ಗೋಲಾಘಾಟ್ ಜಿಲ್ಲೆಯಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ 12 ಮಂದಿ ಸಾವನ್ನಪ್ಪಿ, 30ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ನಲ್ಲಿ 45 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಗೋಲಾಘಾಟ್ ಪೊಲೀಸ್ ವರಿಷ್ಠಾಧಿಕಾರಿ ರಾಜೆನ್ ಸಿಂಗ್, ಬುಧವಾರ ಬೆಳಿಗ್ಗೆ 5 ಗಂಟೆ ಸುಮಾರಿಗೆ ಗೋಲಾಘಾಟ್ ಜಿಲ್ಲೆಯ ಬಲಿಜನ್ನ ದೇರ್ಗಾಂವ್ ಎಂಬಲ್ಲಿ ಬಸ್ ಮತ್ತು ಟ್ರಕ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 12 ಮಂದಿ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. 45 ಮಂದಿ ಪ್ರಯಾಣಿಕರನ್ನು ಹೊತ್ತು ತಿಲಿಂಗ ಮಂದಿರದಿಂದ ಕಮರ್ಬಂಧಕ್ಕೆ ತೆರಳುತ್ತಿದ್ದ ಬಸ್, ಜೊರ್ಹಾತ್ ಕಡೆಯಿಂದ ಬರುತ್ತಿದ್ದ ಟ್ರಕ್ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಉಳಿದ ನಾಲ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, 10 ಮೃತದೇಹವನ್ನು ಈಗಾಗಲೇ ಹೊರಕ್ಕೆ ತೆಗೆಯಲಾಗಿದ್ದು, ದೆರ್ಗಾಂವ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮೃತರನ್ನು ಅನಿಮಾ ಸೈಕಿಯಾ (60), ಸುಬಕುತ್ ಸೈಕಿಯಾ (13), ನಿಹಾರಿಕಾ (10), ದೀಪಾಲಿ ಸೈಕಿಯಾ (37), ನಬಜಿತ್ ಸೈಕಿಯಾ (40), ಪಿಂಕಿ ಸೈಕಿಯಾ (48), ರಿಂಕಿ ಬೋರಾ (18), ಟ್ರಕ್ ಚಾಲಕ ನೂರ್ ಆಲಂ ಹಕ್ ಎಂದು ಗುರುತಿಸಲಾಗಿದೆ. ಒಟ್ಟು ಎಂಟು ಮಂದಿಯ ಗುರುತು ಪತ್ತೆಯಾಗಿದೆ. ಗಾಯಾಳುಗಳನ್ನು ಜೊರ್ಹಾತ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ರವಾನಿಸಲಾಗಿದೆ.
ಅಪಘಾತ ನಡೆದ ತಕ್ಷಣ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಜೊತೆಗೆ ಸ್ಥಳೀಯರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಅಪಘಾತದಲ್ಲಿ 12 ಮಂದಿ ಸಾವನ್ನಪ್ಪಿದ್ದು ಈ ಬಗ್ಗೆ ತನಿಖೆ ನಡೆಸಲಾಗುತ್ತದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಜೊರ್ಹಾತ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಹಿರಿಯ ವೈದ್ಯ ಮಾತನಾಡಿ, ಗಂಭೀರ ಗಾಯಗೊಂಡ 30 ಜನರಿಗೆ ಚಿಕಿತ್ಸೆ ಮುಂದುವರೆದಿದೆ. ಕೆಲವರ ಸ್ಥಿತಿ ಗಂಭೀರವಾಗಿದೆ. ಇವರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ಇದನ್ನೂ ಓದಿ : ಜಪಾನ್ ಭೂಕಂಪನ: 57ಕ್ಕೇರಿದ ಸಾವಿನ ಸಂಖ್ಯೆ, 200ಕ್ಕೂ ಹೆಚ್ಚು ಮನೆಗಳಿಗೆ ಹಾನಿ