ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜ್ಯಪಾಲರ ಹುದ್ದೆಯಿಂದ ಜಗದೀಪ್ ಧನಕರ್ ಅವರನ್ನು ವಜಾಗೊಳಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕೋಲ್ಕತ್ತಾ ಹೈಕೋರ್ಟ್ ತಿರಸ್ಕರಿಸಿದೆ.
ಮುಖ್ಯ ನ್ಯಾಯಮೂರ್ತಿ ಪ್ರಕಾಶ್ ಶ್ರೀವತ್ಸ ಮತ್ತು ನ್ಯಾಯಮೂರ್ತಿ ಆರ್. ಭಾರದ್ವಾಜ್ ಅವರನ್ನೊಳಗೊಂಡ ವಿಭಾಗೀಯ ಪೀಠವು, ಸಂವಿಧಾನದ 361ನೇ ವಿಧಿಯ ಅಡಿಯಲ್ಲಿ ರಾಜ್ಯಪಾಲರು ತಮ್ಮ ಕಚೇರಿಯ ಆಡಳಿತ, ಅಧಿಕಾರ ಮತ್ತು ಕರ್ತವ್ಯಗಳ ನಿರ್ವಹಣೆಯಲ್ಲಿ ಯಾವುದೇ ನ್ಯಾಯಾಲಯಕ್ಕೆ ಉತ್ತರದಾಯಿಗಳಲ್ಲ ಎಂದು ಹೇಳಿದೆ.
ಕೇಂದ್ರ ಸರ್ಕಾರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ವಾದ ಮಂಡಿಸಿ, ಇಂತಹ ಅರ್ಜಿಗಳು ಆಧಾರರಹಿತವಾಗಿದ್ದು, ಪ್ರಚಾರದ ಉದ್ದೇಶಪೂರ್ವಕವಾಗಿ ಹೀಗೆ ಮಾಡಲಾಗಿದೆ. ಆದ್ದರಿಂದ ಅರ್ಜಿದಾರರಿಗೆ ದಂಡ ವಿಧಿಸಬೇಕು. ಈ ಮೂಲಕ ಭವಿಷ್ಯದಲ್ಲಿ ಯಾರೂ ಇದೇ ರೀತಿಯ ಅರ್ಜಿಗಳನ್ನು ಸಲ್ಲಿಸಲು ಧೈರ್ಯ ಮಾಡಬಾರದು ಎಂದು ವಾದಿಸಿದರು.
ಧನಕರ್ ಅವರು ರಾಜ್ಯ ಸರ್ಕಾರದ ಆಡಳಿತದಲ್ಲಿ ಮಧ್ಯಪ್ರವೇಶಿಸುತ್ತಿದ್ದಾರೆ. ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಟು ಟೀಕೆ ಮಾಡುವ ಮೂಲಕ ಸರ್ಕಾರದ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಹೈಕೋರ್ಟ್ ವಕೀಲ, ಅರ್ಜಿದಾರ ರಾಮ ಪ್ರಸಾದ್ ಸರ್ಕಾರ್ ಅವರು ರಿಟ್ ಅರ್ಜಿ ಸಲ್ಲಿಸಿದ್ದರು.