ನವದೆಹಲಿ: ಕೇಂದ್ರೀಯ ತನಿಖಾ ದಳ (ಸಿಬಿಐ) ಎಫ್‌ಐಆರ್ ದಾಖಲಿಸಿಕೊಂಡು ರಾಜ್ಯದ ಒಪ್ಪಿಗೆಯಿಲ್ಲದೆ ಪ್ರಕರಣಗಳ ತನಿಖೆ ಆರಂಭಿಸಿದೆ ಎಂದು ಆರೋಪಿಸಿರುವ ಪಶ್ಚಿಮ ಬಂಗಾಳ ಸರ್ಕಾರದ ಮನವಿ ವಜಾಗೊಳಿಸುವಂತೆ ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್ ಅನ್ನು ಒತ್ತಾಯಿಸಿತು.
ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿ ಯಾವುದೇ ಪ್ರಕರಣದ ತನಿಖೆಗೆ ರಾಜ್ಯದ ಒಪ್ಪಿಗೆಯನ್ನು ಕಡ್ಡಾಯಗೊಳಿಸಲಾಗಿದೆ. ಹೀಗಿದ್ದರೂ ಸಿಬಿಐ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ ಎಂದು ಬಂಗಾಳ ಸರ್ಕಾರ ಹೇಳಿದೆ. ಈ ಕುರಿತು ಕೇಂದ್ರ ಸರ್ಕಾರ, ಸಿಬಿಐ ಸ್ವತಂತ್ರ ಸಂಸ್ಥೆಯಾಗಿದ್ದು, ಅದರ ಮೇಲೆ ಯಾವುದೇ ನಿಯಂತ್ರಣವಿಲ್ಲ ಎಂದು ವಾದಿಸಿದೆ.
ಬಂಗಾಳ ಸರ್ಕಾರವು ಸಂವಿಧಾನದ 131ನೇ ವಿಧಿಯ ಅಡಿಯಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ಮೊಕದ್ದಮೆ ಹೂಡಿದೆ. ಕೇಂದ್ರ ಸರ್ಕಾರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು.
ಹೈಕೋರ್ಟ್ ಆದೇಶದ ಮೇರೆಗೆ ಸಿಬಿಐ ತನಿಖೆ: ಅರ್ಜಿಯಲ್ಲಿ ಉಲ್ಲೇಖಿಸಲಾದ 12 ಪ್ರಕರಣಗಳನ್ನು ಕೋಲ್ಕತ್ತಾ ಹೈಕೋರ್ಟ್‌ನ ಸೂಚನೆಯ ಮೇರೆಗೆ ಸಿಬಿಐ ದಾಖಲಿಸಿದೆ. ಕೆಲವು ಸಂಗತಿಗಳು ಪ್ರಕರಣದಿಂದ ಸಂಪೂರ್ಣವಾಗಿ ಕಾಣೆಯಾಗಿವೆ. ಸತ್ಯಾಂಶಗಳನ್ನು ಹತ್ತಿಕ್ಕಲಾಗಿದೆ. ಈ ನ್ಯಾಯಾಲಯದ ದಾರಿ ತಪ್ಪಿಸುವ ಪ್ರಯತ್ನ ಮಾಡಲಾಗಿದೆ. ಕೋಲ್ಕತ್ತಾ ಹೈಕೋರ್ಟ್ ಆದೇಶದ ಮೇರೆಗೆ ಎಫ್‌ಐಆರ್ ಕೂಡ ದಾಖಲಿಸಲಾಗಿದೆ ಎಂದು ಮೆಹ್ತಾ ಹೇಳಿದರು.
ಪಶ್ಚಿಮ ಬಂಗಾಳ ಸರ್ಕಾರದ ಪರ ವಾದಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಸಿಬಿಐ ಅಲ್ಲ, ಯಾರೂ ಎಫ್‌ಐಆರ್ ದಾಖಲಿಸಲು ಸಾಧ್ಯವಿಲ್ಲ. ಇದೊಂದು ಸಾಂವಿಧಾನಿಕ ವಿಚಾರ. ರಾಜ್ಯ ಸರ್ಕಾರವು ಕೇಂದ್ರ ಏಜೆನ್ಸಿಗಳಿಗೆ ತನಿಖೆಗೆ ನೀಡಿದ್ದ ಸಾಮಾನ್ಯ ಒಪ್ಪಿಗೆ ಹಿಂಪಡೆದ ನಂತರವೂ ಹಲವಾರು ಎಫ್‌ಐಆರ್‌ಗಳು ದಾಖಲಾಗಿದ್ದು, ರಾಜ್ಯವು ಈ ನ್ಯಾಯಾಲಯವನ್ನು ಸಂಪರ್ಕಿಸಬೇಕಾಗಿದೆ ಎಂದರು. ಪ್ರಕರಣದ ವಿಚಾರಣೆ ಬಾಕಿ ಉಳಿದಿದ್ದು, ನವೆಂಬರ್ 23ಕ್ಕೆ ಮುಂದೂಡಲಾಗಿದೆ.
ನವೆಂಬರ್ 16, 2018 ರಂದು ಪಶ್ಚಿಮ ಬಂಗಾಳ ಸರ್ಕಾರವು ರಾಜ್ಯದಲ್ಲಿ ತನಿಖೆ ಮತ್ತು ದಾಳಿಗಳನ್ನು ನಡೆಸಲು ಸಿಬಿಐಗೆ ನೀಡಿದ್ದ 'ಸಾಮಾನ್ಯ ಸಮ್ಮತಿ'ಯನ್ನು ಹಿಂಪಡೆದಿತ್ತು. ಚಿಟ್ ಫಂಡ್, ಕಲ್ಲಿದ್ದಲು ಕಳ್ಳತನ, ಪಡಿತರ ವಿತರಣೆ ಭ್ರಷ್ಟಾಚಾರ ಮತ್ತು ನೇಮಕಾತಿ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಹಲವು ಪ್ರಕರಣಗಳನ್ನು ಸಿಬಿಐ ತನಿಖೆ ನಡೆಸುತ್ತಿದೆ.
ಇದನ್ನೂ ಓದಿ: ಪಿಎಸ್ಐ ನೇಮಕಾತಿ ಹಗರಣ: ಇಂದು ಹೈಕೋರ್ಟ್ ತೀರ್ಪು, ಅಭ್ಯರ್ಥಿಗಳ ಭವಿಷ್ಯ ನಿರ್ಧಾರ