ನವದೆಹಲಿ: ಕೋವಿಡ್ ಎರಡನೇ ಹಂತದ ಅಲೆ ಸಂಪೂರ್ಣವಾಗಿ ಮುಗಿಯದ ಕಾರಣ ದೇಶದಲ್ಲಿ ಜಾರಿಯಲ್ಲಿರುವ ಕೊರೊನಾ ಮಾರ್ಗಸೂಚಿ ಆಗಸ್ಟ್ 31ರವರೆಗೆ ಮುಂದುವರಿಕೆ ಮಾಡಿ ಕೇಂದ್ರ ಸರ್ಕಾರ ಮಹತ್ವದ ಆದೇಶ ಹೊರಹಾಕಿದೆ.
ಹೆಚ್ಚು ಕೊರೊನಾ ಸೋಂಕಿತ ಪ್ರಕರಣಗಳಿರುವ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಗೃಹ ಇಲಾಖೆ ಕಾರ್ಯದರ್ಶಿ ಅಜಯ ಬಲ್ಲಾ ಈ ವಿಚಾರವಾಗಿ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದ್ದು, ಹೆಚ್ಚಿನ ಕೋವಿಡ್ ಪ್ರಕರಣಗಳಿರುವ ಜಿಲ್ಲೆಗಳಲ್ಲಿ ಸಾಧವಾದಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.
ಇದನ್ನೂ ಓದಿ: ಕೃನಾಲ್ ಪ್ರಾಥಮಿಕ ಸಂಪರ್ಕ: ಧವನ್ ಸೇರಿ ಈ 8 ಪ್ಲೇಯರ್ಸ್ 2ನೇ T20 ಪಂದ್ಯದಿಂದ ಹೊರಕ್ಕೆ?
ಕಳೆದ ಕೆಲ ದಿನಗಳಿಂದ ಕೋವಿಡ್ ಪಾಸಿಟಿವ್ ಪ್ರಮಾಣದಲ್ಲಿ ಕಡಿಮೆಯಾಗಿದ್ದರೂ, ಹೆಚ್ಚಿನ ಪರೀಕ್ಷೆ ನಡೆಸುವಂತೆ ತಿಳಿಸಲಾಗಿದೆ. ಸಾಮಾಜಿಕ ಅಂತರ, ಮಾಸ್ಕ್ ಬಳಕೆ ಹಾಗೂ ವ್ಯಾಕ್ಸಿನೇಷನ್ ಪಡೆದುಕೊಳ್ಳಲು ಆದ್ಯತೆ ನೀಡಿ ಎಂದಿದ್ದಾರೆ. ಬರುವ ದಿನಗಳಲ್ಲಿ ಕೆಲವು ರಾಜ್ಯಗಳಲ್ಲಿ ಹಬ್ಬ, ಜಾತ್ರೆ ನಡೆಯಲಿದ್ದು, ಈ ಸಂದರ್ಭದಲ್ಲಿ ಕೋವಿಡ್ ಮಾರ್ಗಸೂಚಿ ಕೈಗೊಳ್ಳುವಂತೆಯೂ ನಿರ್ದೇಶನ ನೀಡಿದ್ದಾರೆ.
ಕಳೆದ ಕೆಲ ದಿನಗಳಿಂದ ಮಹಾರಾಷ್ಟ್ರ, ಕೇರಳದಲ್ಲಿ ಕೊರೊನಾ ಸೋಂಕಿತ ಪ್ರಕರಣದಲ್ಲಿ ತುಸು ಏರಿಕೆ ಕಂಡು ಬಂದಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.