ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಬಿಟ್ ಕಾಯಿನ್ ಸುದ್ದು ಮಾಡುತ್ತಿದ್ದು, ಮುಖ್ಯಮಂತ್ರಿ ಹೆಸರೂ ಸುತ್ತಿಕೊಳ್ಳುತ್ತಿರುವ ನಡುವೆ ಸಿಎಂ ಬಸವರಾಜ ಬೊಮ್ಮಾಯಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.
ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಪ್ರಧಾನಿ ಕಚೇರಿಯಲ್ಲಿ ಪಿಎಂ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ರಾಮಾಯಣ ಕೃತಿಯನ್ನು ನೀಡಿ ರಾಜ್ಯ ಸರ್ಕಾರದ ಪರವಾಗಿ ಗೌರವ ಸಲ್ಲಿಕೆ ಮಾಡಿದರು. ನಂತರ ಕೆಲ ಕಾಲ ರಾಜ್ಯ ರಾಜಕೀಯ ಕುರಿತು ಮಹತ್ವದ ಮಾತುಕತೆ ನಡೆಸಿದರು.
ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಬಿಟ್ ಕಾಯಿನ್ ಪ್ರಕರಣ ದೇಶಾದ್ಯಂತ ಸುದ್ದಿಯಾಗುತ್ತಿದ್ದು, ಪ್ರತಿಪಕ್ಷ ಕಾಂಗ್ರೆಸ್ ಆಡಳಿತ ಪಕ್ಷದ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೆಸರನ್ನು ಉಲ್ಲೇಖಿಸಿ ಕಾಂಗ್ರೆಸ್ ನಾಯಕರು ಆರೋಪ ಮಾಡುತ್ತಿದ್ದಾರೆ. ಇದರಿಂದ ಕಸಿವಿಸಿಗೊಂಡಿರುವ ಸಿಎಂ ಪ್ರತಿಪಕ್ಷಗಳಿಗೆ ತಿರುಗೇಟು ನೀಡುತ್ತಲೇ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ.
ಹಗರಣಗಳು, ಆರೋಪ ಮುಕ್ತ ಆಡಳಿತಕ್ಕೆ ಮನ್ನಣೆ ನೀಡಿರುವ ಪ್ರಧಾನಿ ಮೋದಿ ಅವರು ಭ್ರಷ್ಟಾಚಾರದ ಆರೋಪಗಳನ್ನು ಸಹಿಸುವುದಿಲ್ಲ. ಹಾಗಾಗಿ ಬಿಟ್ ಕಾಯಿನ್ ಪ್ರಕರಣ ಕುರಿತು ಪ್ರಧಾನಿಗಳಿಗೆ ಸಿಎಂ ಸಮಗ್ರ ವಿವರಣೆ ನೀಡಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.