ನವದೆಹಲಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎರಡು ದಿನಗಳ ಕಾಲ ದೆಹಲಿ ಪ್ರವಾಸ ಕೈಗೊಂಡಿರುವುದು ಕುತೂಹಲ ಮೂಡಿಸಿದೆ. ಈ ವೇಳೆ ನವದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರನ್ನು ಭೇಟಿಯಾಗಲು ಪ್ರಯತ್ನ ಮಾಡುವುದಾಗಿ ತಿಳಿಸಿದರು.
ರಾಜ್ಯದಲ್ಲಿನ ಕೆಲ ಮಹತ್ವದ ಯೋಜನೆಗಳ ವಿಚಾರವಾಗಿ ಕೇಂದ್ರ ಸಚಿವರೊಂದಿಗೆ ಮಾತುಕತೆ ನಡೆಸುವುದಾಗಿ ತಿಳಿಸಿರುವ ಬೊಮ್ಮಾಯಿ, ದೊಡ್ಡ ಪ್ರಮಾಣದಲ್ಲಿ ಯೋಜನೆಗಳನ್ನ ಅರಂಭ ಮಾಡುವ ಇರಾದೆ ಇಟ್ಟುಕೊಂಡಿದ್ದೇವೆ. ಅದಕ್ಕಾಗಿ ಕೇಂದ್ರ ಸರ್ಕಾರದ ಅನುಮತಿ ಪಡೆದುಕೊಳ್ಳಲಾಗುವುದು ಎಂದು ತಿಳಿಸಿದರು.
ರಾಜ್ಯಕ್ಕೆ ಬರುವ ಜಿಎಸ್ಟಿ ಬಗ್ಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ರಾಜ್ಯದ ಪ್ರಮುಖ ಹೆದ್ದಾರಿ ಯೋಜನೆಗಳ ವಿಚಾರವಾಗಿ ನಿತಿನ್ ಗಡ್ಕರಿ ಅವರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಪ್ರಮುಖವಾಗಿ ಗಡ್ಕರಿ ಅವರಿಗೆ ರಾಜ್ಯದ ಲೋಕೋಪಯೋಗಿ ಮತ್ತು ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಗುವುದು. ವಸತಿ ಹಾಗೂ ನಗರಾಭಿವೃದ್ಧಿ ಸಚಿವರ ಭೇಟಿಗೂ ಸಮಯ ನಿಗದಿಪಡಿಸಲಾಗಿದೆ ಎಂದು ಇದೇ ವೇಳೆ ಸಿಎಂ ಬೊಮ್ಮಾಯಿ ತಿಳಿಸಿದರು.