ಕೊಯಮತ್ತೂರು(ತಮಿಳುನಾಡು) : 12ನೇ ತರಗತಿಯಲ್ಲಿ ವ್ಯಾಸಂಗ ಮಾಡ್ತಿದ್ದ ವಿದ್ಯಾರ್ಥಿನಿಯೋರ್ವಳು(Student suicide) ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಕಾಲೇಜ್ ಶಿಕ್ಷಕನನ್ನು ಬಂಧಿಸಲಾಗಿದೆ. ಆತನ ವಿರುದ್ಧ ಪೋಕ್ಸೋ(POCSO act) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಕೊಯಮತ್ತೂರಿನಲ್ಲಿ ವಿದ್ಯಾರ್ಥಿನಿ ಯಾರು ಇಲ್ಲದ ಸಂದರ್ಭದಲ್ಲಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಳು. ಇದರ ಬೆನ್ನಲ್ಲೇ ಆಕೆಯ ಪೋಷಕರು ಮತ್ತು ಸ್ನೇಹಿತರು ಶಾಲಾ ಶಿಕ್ಷಕನ ವಿರುದ್ಧ ಲೈಂಗಿಕ ದೌರ್ಜನ್ಯದ ಗಂಭೀರ ಆರೋಪ ಮಾಡಲಾಗಿತ್ತು. ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ.
ಏನಿದು ಪ್ರಕರಣ?
ಖಾಸಗಿ ಕಾಲೇಜ್ನಲ್ಲಿ ವ್ಯಾಸಂಗ ಮಾಡ್ತಿದ್ದ ವಿದ್ಯಾರ್ಥಿನಿಯೋರ್ವಳಿಗೆ ಅದೇ ಕಾಲೇಜ್ನ ಶಿಕ್ಷಕ ಲೈಂಗಿಕ ಕಿರುಕುಳ ನೀಡಿದ್ದನೆಂಬ ಆರೋಪ ಕೇಳಿ ಬಂದಿತ್ತು. ಹೀಗಾಗಿ ಬೇರೆ ಕಾಲೇಜ್ಗೆ ಪ್ರವೇಶಾತಿ ಪಡೆದುಕೊಂಡಿದ್ದಳು. ಇಷ್ಟಾದರೂ ಕೂಡ ಮೊಬೈಲ್ ಮೂಲಕ ಶಿಕ್ಷಕ ತನ್ನ ದುರ್ವತನೆ ಮುಂದುವರೆಸಿದ್ದನು. ಹೀಗಾಗಿ ಶಿಕ್ಷಕನ ಲೈಂಗಿಕ ಕಿರುಕುಳದ ಒತ್ತಡಕ್ಕೊಳಗಾಗಿದ್ದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂಬ ಮಾತುಗಳು ಕೇಳಿಬರುತ್ತಿವೆ.
ಇದನ್ನೂ ಓದಿರಿ: 17 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ, ಶಿಕ್ಷಕನ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ
ವಿದ್ಯಾರ್ಥಿನಿ ಸಾವಿಗೆ ನ್ಯಾಯ ದೊರಕಿಸಿಕೊಡುವಂತೆ ಆಗ್ರಹಿಸಿರುವ ಪೋಷಕರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಇದರ ಬೆನ್ನಲ್ಲೇ ಶಿಕ್ಷಕನ ವಿರುದ್ಧ ಐಪಿಸಿ 306(IPC 306) ಸೇರಿದಂತೆ ವಿವಿಧ ಸೆಕ್ಷನ್ಗಳ ಅಡಿ ದೂರು ದಾಖಲು ಮಾಡಿಕೊಳ್ಳಲಾಗಿತ್ತು. ಇದೀಗ ಪೋಕ್ಸೋ ಕಾಯ್ದೆಯಡಿ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.