ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ರಾತ್ರಿ ಸರ್ ಗಂಗಾ ರಾಮ್ ಆಸ್ಪತ್ರೆಯಲ್ಲಿ ದಾಖಲಾಗಿರುವ ತಮ್ಮ ತಾಯಿ ಮತ್ತು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ. ರಾತ್ರಿಯಿಡೀ ತಾಯಿ ಜೊತೆ ಇದ್ದು, ತಾಯಿಯ ಆರೋಗ್ಯ ವಿಚಾರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
75 ವರ್ಷದ ಸೋನಿಯಾ ಗಾಂಧಿ ಅವರಿಗೆ ಜೂನ್ 2ರಂದು ಕೋವಿಡ್ ಪಾಸಿಟಿವ್ ದೃಢಪಟ್ಟಿತ್ತು. ಸೆಲ್ಫ್ ಕ್ವಾರಂಟೈನ್ ಆಗಿದ್ದ ಅವರನ್ನು ಕೋವಿಡ್ ಸಂಬಂಧಿತ ಸಮಸ್ಯೆಗಳಿಂದಾಗಿ ಭಾನುವಾರ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಾಹುಲ್ ಗಾಂಧಿ ಮತ್ತು ಅವರ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಸೋಮವಾರ ತಮ್ಮ ತಾಯಿಯನ್ನು ಆಸ್ಪತ್ರೆಗೆ ಬಂದು ಭೇಟಿ ಮಾಡಿದ್ದರು.
ರಾಹುಲ್ ಗಾಂಧಿ ಅವರು ಜಾರಿ ನಿರ್ದೇಶನಾಲಯದ (ಇಡಿ) ವಿಚಾರಣೆಯಲ್ಲಿ ಭಾಗಿಯಾಗಿದ್ದ ಕಾರಣ ಪ್ರಿಯಾಂಕ ಗಾಂಧಿ ಅವರು ತಮ್ಮ ತಾಯಿಯೊಂದಿಗೆ ಇದ್ದರು ಎಂದು ಮೂಲಗಳು ತಿಳಿಸಿವೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ರಾಹುಲ್ ಗಾಂಧಿ ಅವರನ್ನು ಪ್ರಶ್ನಿಸಿದ್ದು, ಪಕ್ಷದ ಕಾರ್ಯಕರ್ತರು ಹಲವು ನಗರಗಳಲ್ಲಿ ದೊಡ್ಡ ಪ್ರಮಾಣದ ಪ್ರತಿಭಟನೆಗಳನ್ನು ನಡೆಸಿದ್ದರು.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಅವರು ಸೋನಿಯಾ ಗಾಂಧಿ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಹಾಗೂ ಕೆಲವು ದಿನಗಳ ಕಾಲ ಆಸ್ಪತ್ರೆಯಲ್ಲಿರುತ್ತಾರೆ ಎಂದು ಭಾನುವಾರ ಹೇಳಿದ್ದರು. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನಿಯಾ ಗಾಂಧಿ ಜೂನ್ 8 ರಂದು ಇಡಿ ಮುಂದೆ ಹಾಜರಾಗಬೇಕಿತ್ತು. ಆದರೆ, ಅವರು ತನಿಖಾ ಸಂಸ್ಥೆಯಿಂದ ಹೆಚ್ಚಿನ ಸಮಯ ಕೋರಿದ್ದರು. ಇದೀಗ ಜೂನ್ 23 ರಂದು ಹಾಜರಾಗುವಂತೆ ಅವರಿಗೆ ಇಡಿ ಹೊಸ ಸಮನ್ಸ್ ಜಾರಿ ಮಾಡಿದೆ.
ಇದನ್ನೂ ಓದಿ : ಇಂದು ಇಡಿ ಮುಂದೆ ರಾಹುಲ್: ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ.. ಕೈ ರ‍್ಯಾಲಿಗೆ ಇಲ್ಲ ಅನುಮತಿ!