ನವದೆಹಲಿ: ಕಳೆದೊಂದು ತಿಂಗಳಿನಿಂದ ಕರ್ನಾಟಕದಲ್ಲಿ ಹಿಜಾಬ್ ವಿವಾದ ನಡೆಯುತ್ತಿದೆ. ಹಿಜಾಬ್ ಧರಿಸಿ ವಿದ್ಯಾರ್ಥಿನಿಯರು ತರಗತಿಗೆ ಬರುವುದಕ್ಕೆ ಉಡುಪಿಯ ಕಾಲೇಜೊಂದರಲ್ಲಿ ಮೊದಲು ವಿರೋಧ ವ್ಯಕ್ತವಾಗಿದ್ದು, ಇದೀಗ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳು ಹಿಜಾಬ್ ಮತ್ತು ಕೇಸರಿ ಶಾಲು ಧರಿಸಿ ಕಾಲೇಜಿಗೆ ಬರುತ್ತಿದ್ದಾರೆ. ಕರ್ನಾಟಕದ ಹಿಜಾಬ್ ವಿವಾದ ಇಂದು ಲೋಕಸಭೆಯಲ್ಲೂ ಪ್ರತಿಧ್ವನಿಸಿದೆ.
ಲೋಕಸಭೆಯಲ್ಲಿ ಮಾತನಾಡಿದ ಕೇರಳದ ಕಾಂಗ್ರೆಸ್ ಸಂಸದ ಟಿಎನ್ ಪ್ರತಾಪನ್, "ಕರ್ನಾಟಕದ ಹಲವು ಕಾಲೇಜುಗಳಲ್ಲಿ ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿನಿಯರು ಕಾಲೇಜು ಆವರಣ ಹಾಗೂ ತರಗತಿ ಪ್ರವೇಶಿಸುವುದನ್ನು ನಿಷೇಧಿಸಲಾಗುತ್ತಿದೆ. ಈಗ ಈ ವಿದ್ಯಾರ್ಥಿನಿಯರು ಕಾಲೇಜು ಗೇಟ್ಗಳ ಹೊರಗೆ ಕುಳಿತು ತಮ್ಮ ಮೂಲಭೂತ ಹಕ್ಕುಗಳಿಗಾಗಿ ಪ್ರತಿಭಟಿಸುತ್ತಿದ್ದಾರೆ" ಎಂದರು.
ಇದನ್ನೂ ಓದಿ: ಚಿಕ್ಕಮಗಳೂರು : ಹಿಜಾಬ್ಗೆ ಒತ್ತಾಯಿಸಿ 1,500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಪ್ರತಿಭಟನೆ
"ಹಿಜಾಬ್ ಅನ್ನೋದು ಸಂಸ್ಕೃತಿ ಹಾಗೂ ಧರ್ಮದ ಒಂದು ಭಾಗ. ನಾವು ನಮ್ಮ ಭಾರತವನ್ನು ಎಲ್ಲಿಗೆ ಕೊಂಡೊಯ್ಯುತ್ತಿದ್ದೇವೆ? ನಮ್ಮ ವೈವಿಧ್ಯತೆಯನ್ನು ಕಳೆದುಕೊಳ್ಳಲು ಸಾಧ್ಯವಿಲ್ಲ. ವಿದ್ಯಾರ್ಥಿಗಳ ಸಾಂವಿಧಾನಿಕ ಹಕ್ಕುಗಳನ್ನು ಖಚಿತಪಡಿಸಿಕೊಳ್ಳಲು ಶಿಕ್ಷಣ ಸಚಿವರು ಈ ವಿಷಯದಲ್ಲಿ ಮಧ್ಯಪ್ರವೇಶಿಸಬೇಕು ಎಂದು ನಾನು ವಿನಂತಿಸುತ್ತೇನೆ" ಎಂದು ಪ್ರತಾಪನ್ ಹೇಳೀದರು. ಆದರೆ ಕೈ ಸಂಸದನ ಮಾತಿಗೆ ಬಿಜೆಪಿ ಸಂಸದರು ವಿರೋಧ ವ್ಯಕ್ತಪಡಿಸಿದ್ದು, ಸದನದಲ್ಲಿ ಗದ್ದಲದ ವಾತಾವರಣ ಸೃಷ್ಟಿಯಾಯಿತು.