ನವದೆಹಲಿ : ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ನಡೆದ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆಯಲ್ಲಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮೋದಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರ ರೈತರು ಮತ್ತು ಸಾಮಾನ್ಯ ಜನರ ಕುರಿತ ಸಂವೇದನೆಯನ್ನು ಕಳೆದುಕೊಂಡಿದೆ ಎಂದು ಟೀಕಿಸಿದ್ದಾರೆ.
ಕೃಷಿ ಕಾಯ್ದೆಗಳ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಸುಮಾರು 700 ರೈತರು ಸಾವನ್ನಪ್ಪಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯು ಪ್ರತಿ ಕುಟುಂಬವನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದೆ ಎಂದು ಸೋನಿಯಾ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗಡಿ ಸಮಸ್ಯೆಗಳ ಕುರಿತು ಸಂಸತ್ನಲ್ಲಿ ಪೂರ್ಣ ಪ್ರಮಾಣದ ಚರ್ಚೆಗೆ ನಾವು ಸಿದ್ಧ ಎಂದು ಸೋನಿಯಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ರಾಜ್ಯಸಭೆಯ 12 ಸಂಸದರ ಅಮಾನತು ಕುರಿತಂತೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಈ ನಡೆ ಸ್ವೀಕಾರ್ಹವಲ್ಲ. ನಾವು ಅಮಾನತುಗೊಂಡ ಸಂಸದರ ಪರವಾಗಿ ಒಗ್ಗಟ್ಟಿನಿಂದ ನಿಲ್ಲುತ್ತೇವೆ ಎಂದು ಸೋನಿಯಾ ಹೇಳಿದ್ದು, ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು.
ಈ ಮೊದಲೇ ಪ್ರಧಾನಿ ಮೋದಿ ನೇತೃತ್ವದಲ್ಲಿ ಸಂಸದೀಯ ಸಭೆ ನಡೆಸಿದ್ದ ಬಿಜೆಪಿ ಚಳಿಗಾಲದ ಅಧಿವೇಶನದಲ್ಲಿ ಸಂಸದರ ಹಾಜರಾತಿ ಕಡಿಮೆಯಾಗುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿ, ಅಧಿವೇಶನಕ್ಕೆ ಹಾಜರಾಗಲು ಎಲ್ಲಾ ಸಂಸದರು ಆದ್ಯತೆ ನೀಡಬೇಕೆಂದು ಒತ್ತಾಯಿಸಿದ್ದರು.
ಇದನ್ನೂ ಓದಿ: ಜಮ್ಮು ಕಾಶ್ಮೀರದ ಶೋಪಿಯಾನ್‌ನಲ್ಲಿ ಸೇನೆ-ಉಗ್ರರ ನಡುವೆ ಗುಂಡಿನ ಕಾಳಗ