ಪಾಟ್ನಾ(ಬಿಹಾರ): ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಮಹಿಳೆಯೋರ್ವಳ ಮೇಲೆ ಆಸ್ಪತ್ರೆಯ ಮೂವರು ಸಿಬ್ಬಂದಿ ಸಾಮೂಹಿಕ ಅತ್ಯಾಚಾರವೆಸಗಿದ್ದು, ಘಟನೆಗೆ ಸಂಬಂಧಿಸಿದಂತೆ ಇದೀಗ ಪ್ರಕರಣ ದಾಖಲಾಗಿದೆ.
ಬಿಹಾರದ ಪಾಟ್ನಾದಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ಇದೀಗ ಆಸ್ಪತ್ರೆ ವಿರುದ್ಧ ಸಂತ್ರಸ್ತೆಯ ಮಗಳು ಪ್ರಕರಣ ದಾಖಲು ಮಾಡಿದ್ದಾಳೆ. 45 ವರ್ಷದ ಕೊರೊನಾ ಸೋಂಕಿತ ಮಹಿಳೆ ಖಾಸಗಿ ಆಸ್ಪತ್ರೆಯ ಐಸಿಯು ವಾರ್ಡ್ನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಳು. ಈ ವೇಳೆ ಆಸ್ಪತ್ರೆಯ ಮೂವರು ಸಿಬ್ಬಂದಿ ಆಕೆಯ ಮೇಲೆ ದುಷ್ಕೃತ್ಯವೆಸಗಿದ್ದಾರೆಂದು ಆರೋಪಿಸಲಾಗಿದೆ.
ಪ್ರಕರಣದ ಬಗ್ಗೆ ಮಾಹಿತಿ ಗೊತ್ತಾಗುತ್ತಿದ್ದಂತೆ ಯುವತಿ ಆಸ್ಪತ್ರೆ ಆಡಳಿತ ವರ್ಗದ ವಿರುದ್ಧ ದೂರು ದಾಖಲು ಮಾಡಿದ್ದಾರೆ. ಆದರೆ ಇದನ್ನ ಆಸ್ಪತ್ರೆ ಸಂಪೂರ್ಣವಾಗಿ ಅಲ್ಲಗೆಳೆದಿದೆ. ಕೋವಿಡ್ ಸೋಂಕು ದೃಢಗೊಂಡಿದ್ದ ಕಾರಣ ಮೇ 17ರಂದು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಮಾತನಾಡಿರುವ ಪೊಲೀಸರು ದೂರು ದಾಖಲು ಮಾಡಿಕೊಳ್ಳಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಕೋವಿಡ್ ಲಸಿಕೆ ವ್ಯರ್ಥವಾಗುವುದನ್ನ ತಡೆಗಟ್ಟಿ.. ರಾಜ್ಯಗಳಿಗೆ ಪ್ರಧಾನಿ ಮೋದಿ ಸಲಹೆ
ವೆಂಟಿಲೇಟರ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದ ಕಾರಣ ಆಕೆಯ ಹೇಳಿಕೆ ಪಡೆದುಕೊಳ್ಳಲು ಸಾಧ್ಯವಾಗಲಿಲ್ಲ. ಆದರೆ ಬುಧವಾರ ಆಕೆ ಸಾವನ್ನಪ್ಪಿದ್ದಾಳೆಂದು ವೈದ್ಯರು ಘೋಷಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಆಸ್ಪತ್ರೆಯ ಆಡಳಿತ ಮಂಡಳಿ ವಿರುದ್ಧ ದೂರು ಸ್ವೀಕರಿಸಲಾಗಿದ್ದು, ದೂರಿನಲ್ಲಿ ಆರೋಪಿಗಳ ಹೆಸರು ಉಲ್ಲೇಖ ಮಾಡಿಲ್ಲ. ಲೈಂಗಿಕ ದೌರ್ಜನ್ಯ ನಡೆದಿರುವ ಬಗ್ಗೆ ಖಚಿತತೆ ಪಡಿಸಿಕೊಳ್ಳಲು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದು, ಹೆಚ್ಚಿನ ತನಿಖೆ ನಡೆಸಲಾಗುವುದು ಎಂದು ಪಾಟ್ನಾ ಜಿಲ್ಲಾಧಿಕಾರಿ ಎಂ.ಎಲ್. ಖಾನ್ ತಿಳಿಸಿದ್ದಾರೆ.