ನವದೆಹಲಿ: ತಮಿಳುನಾಡಿನ ಕೂನೂರಿನಲ್ಲಿ ಸೇನಾ ಹೆಲಿಕಾಪ್ಟರ್ ಪತನದ ಕುರಿತಂತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಲೋಕಸಭೆಗೆ ಮಾಹಿತಿ ನೀಡಿದರು. ಈ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ ಎಂದು ಅವರು ತಿಳಿಸಿದರು.
ಏರ್ ಮಾರ್ಷಲ್ ಮಾನವೇಂದ್ರ ಸಿಂಗ್ ನೇತೃತ್ವದಲ್ಲಿ ತನಿಖೆ ನಡೆಯಲಿದೆ. ಈ ತನಿಖಾ ತಂಡ ಬುಧವಾರವೇ ವೆಲಿಂಗ್ಟನ್ ತಲುಪಿ ತನಿಖೆ ಆರಂಭಿಸಿದೆ ಎಂದು ರಕ್ಷಣಾ ಸಚಿವರು ಮಾಹಿತಿ ನೀಡಿದರು.
ಸಿಡಿಎಸ್ ಜನರಲ್ ಬಿಪಿನ್ ರಾವತ್ ಹಾಗು ಇತರ ಸೇನಾ ಸಿಬ್ಬಂದಿಯ ಅಂತಿಮ ಸಂಸ್ಕಾರವನ್ನು ಸೂಕ್ತ ಸೇನಾ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಅವರು ಹೇಳಿದ್ದಾರೆ.
ದುರಂತದಲ್ಲಿ ಹುತಾತ್ಮರಾದವರಿಗಾಗಿ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ 2 ನಿಮಿಷಗಳ ಕಾಲ ಮೌನಾಚರಣೆ ನಡೆಯಿತು.
ಗಾಯಾಳು ವರುಣ್ ಸಿಂಗ್ ಬೆಂಗಳೂರಿಗೆ ರವಾನೆ?:
ಇನ್ನು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವೈದ್ಯರ ನಿಗಾದಲ್ಲಿದ್ದಾರೆ. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರೆ ಅವರನ್ನು ವೆಲಿಂಗ್ಟನ್ನಿಂದ ಬೆಂಗಳೂರಿನ ಕಮಾಂಡ್ ಆಸ್ಪತ್ರೆಗೆ ಸ್ಥಳಾಂತರ ಮಾಡಬಹುದು ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: IAF Helicoptor Black box: ತಮಿಳುನಾಡಿನಲ್ಲಿ ಪತನಗೊಂಡ ಹೆಲಿಕಾಪ್ಟರ್ನ ಬ್ಲ್ಯಾಕ್ ಬಾಕ್ಸ್ ಪತ್ತೆ