ಶ್ರೀನಗರ/ಬೆಂಗಳೂರು: ದೇಶವನ್ನು ಒಂದುಗೂಡಿಸಲು ಹಾಗೂ ಜ್ವಲಂತ ಸಮಸ್ಯೆಗಳ ಕುರಿತು ಜನಪರವಾದ ಧ್ವನಿ ಎತ್ತಲು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ಹಮ್ಮಿಕೊಳ್ಳಲಾದ ಭಾರತ ಜೋಡೋ ಯಾತ್ರೆ ಇಂದು ಸಂಪೂರ್ಣವಾಗುತ್ತಿದೆ. ಕಳೆದ ಐದು ತಿಂಗಳಿಂದ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಸುದೀರ್ಘ 3,570 ಕಿ.ಮೀ. ಸಾಗಿದ ಭಾರತ್ ಜೋಡೋ ದೇಶದ ರಾಜಕೀಯ ಇತಿಹಾಸದ ಪುಟ ಸೇರಿದೆ. ವಿಭಿನ್ನ ಹವಾಮಾನ ವೈಪರೀತ್ಯದ ಸವಾಲು, ರಾಜಕೀಯ ಎದುರಾಳಿಗಳ ಟೀಕೆಗಳು ಸೇರಿದಂತೆ ಹಲವು ಅಡೆತಡೆಗಳನ್ನು ಮೀರಿ ಯಾತ್ರೆ ಗುರಿ ತಲುಪಿದೆ.
ಇಂದು ಕಾಶ್ಮೀರದಲ್ಲಿ ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭ ನಡೆಯುತ್ತಿದ್ದು, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಪ್ರಮುಖ ನಾಯಕರು ಕಣಿವೆ ರಾಜ್ಯಕ್ಕೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ಕಾಶ್ಮೀರದ ಹಿಮಪಾತ ಹಾಗೂ ಪ್ರಕೃತಿ ಸೌಂದರ್ಯಕ್ಕೆ ಮನಸೋತಿರುವ ಡಿ.ಕೆ. ಶಿವಕುಮಾರ್ ವಿಡಿಯೋ ಮೂಲಕ ತಮ್ಮ ಅನುಭವ ಹಂಚಿಕೊಂಡಿದ್ದಾರೆ.
"ಭಾರತ ಜೋಡೋ ಯಾತ್ರೆಯ ಅಂತಿಮ ದಿನ ನಾವೆಲ್ಲ ಕಾಶ್ಮೀರದ ಶ್ರೀನಗರಕ್ಕೆ ಆಗಮಿಸಿದ್ದೇವೆ. ಯಾತ್ರೆ ರುವಾರಿ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಜೊತೆ ಊಟ ಮುಗಿಸಿ ನಮ್ಮ ಕೊಣೆಗೆ ಬಂದು ಮಲಗುವಷ್ಟರಲ್ಲಿ ರಾತ್ರಿ 1 ಗಂಟೆ ಆಗಿತ್ತು. ರಾತ್ರಿ ಇಲ್ಲಿನ ಹವಾಮಾನ 9° ಸೆಲ್ಸಿಯಸ್ ಇತ್ತು. ಇಂದು ಬೆಳಗ್ಗೆ ಕೊಠಡಿಯ ಹೊರಗೆ ಬಂದು ನೋಡಿದಾಗ ನನ್ನ ಜೀವನದಲ್ಲಿ ಎಂದೂ ನೋಡಿರದ ಹಿಮಪಾತ ಹಾಗೂ ಅದರ ಸೌಂದರ್ಯ ಮನಸೂರೆಗೊಳಿಸಿತು. ಧಾರಾಕಾರ ಮಳೆಯಂತೆ ಹಿಮ ಸುರಿಯುತ್ತಿದೆ. ಹಿಂದೆಂದೂ ನಾನು ಈ ರೀತಿಯ ಅದ್ಭುತ ದೃಶ್ಯ ಕಂಡಿರಲಿಲ್ಲ. ನಾನು ಈ ಹಿಂದೆ ಸ್ವಿಜರ್ಲೆಂಡ್ ಮತ್ತಿತರ ದೇಶಗಳಿಗೆ ಭೇಟಿ ನೀಡಿದ್ದೇನೆ. ಆದರೆ ಇಂದು ನನಗೆ ಆಗಿರುವ ಪ್ರಕೃತಿ ಸೌಂದರ್ಯದ ಅನುಭವ ಹಿಂದೆಂದೂ ಆಗಿರಲಿಲ್ಲ. ಇದನ್ನು ಎಂದು ಮರೆಯಲು ಸಾಧ್ಯವಿಲ್ಲ" ಎಂದು ಅನುಭವ ವಿವರಿಸಿದ್ದಾರೆ.
ಬೆಂಗಳೂರಿನಿಂದ ನಿನ್ನೆಯೇ ಹೊರಟು ಶ್ರೀನಗರ ಸೇರಿರುವ ಡಿಕೆಶಿ, ರಾತ್ರಿ ಅಲ್ಲಿಯೇ ತಂಗಿದ್ದಾರೆ. ಇಂದು ಬೆಳಗ್ಗೆದ್ದು ತಮ್ಮ ಅನುಭವ ತಿಳಿಸಿದ್ದಾರೆ. ಸಾಕಷ್ಟು ಸಂಸದರೂ ಸಹ ಇಲ್ಲಿಗೆ ಆಗಮಿಸಿ ತಂಗಿದ್ದನ್ನು ಸ್ಮರಿಸಿರುವ ಅವರು, ರಾಹುಲ್ ಗಾಂಧಿ ಸಹ ನಿನ್ನೆ ಇಲ್ಲಿಯೇ ತಂಗಿದ್ದರು. ಈ ಸಂದರ್ಭದಲ್ಲಿ ಅವರ ಕಾಟೆಜ್ ಅನ್ನು ತೋರಿಸುವ ಪ್ರಯತ್ನ ಮಾಡಿದ್ದಾರೆ.
ಕಾಂಗ್ರೆಸ್ ನಾಯಕರ ಪಾಲಿಗೆ ರಾಹುಲ್ ಗಾಂಧಿ ಯಶಸ್ವಿಯಾಗಿ ಪೂರ್ಣಗೊಳಿಸಿರುವ ಭಾರತ್ ಜೋಡೊ ಪಾದಯಾತ್ರೆ ಸ್ಫೂರ್ತಿಯ ಚಿಲುಮೆಯಾಗಿ ಲಭಿಸಿದೆ. ಕೆಲ ತಿಂಗಳಲ್ಲಿ ನಡೆಯುವ ಕರ್ನಾಟಕ ವಿಧಾನಸಭೆ ಚುನಾವಣೆಯ ಮೇಲೂ ಇದು ಪರಿಣಾಮ ಬೀರಲಿದೆ ಎಂಬ ವಿಶ್ವಾಸ ಕಾಂಗ್ರೆಸ್ ನಾಯಕರದ್ದು. ರಾಜ್ಯದಲ್ಲಿಯೂ ಪಾದಯಾತ್ರೆ, ಬಸ್ ಯಾತ್ರೆಗಳು ನಡೆಯುತ್ತಿದ್ದು, 2018 ರಲ್ಲಿ ಕೈತಪ್ಪಿರುವ ಅಧಿಕಾರವನ್ನು ಮರಳಿ ಪಡೆಯುವ ಯತ್ನದಲ್ಲಿ ಕಾಂಗ್ರೆಸ್ ನಾಯಕರಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಮೂರು ವರ್ಷ ಹಿಂದೆ ಅಧಿಕಾರ ವಹಿಸಿಕೊಳ್ಳುವ ಸಂದರ್ಭದಲ್ಲೇ ಡಿ.ಕೆ. ಶಿವಕುಮಾರ್ 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ಭರವಸೆಯನ್ನು ಹೈಕಮಾಂಡ್ಗೆ ನೀಡಿದ್ದಾರೆ. ಆ ಮಾತನ್ನು ಈಗ ಉಳಿಸಿಕೊಳ್ಳಬೇಕಾದ ಅನಿವಾರ್ಯ ಎದುರಾಗಿದೆ.
ಸಿದ್ದರಾಮಯ್ಯ ಪ್ರವಾಸ ಮೊಟಕು: ದೆಹಲಿಯಿಂದ ಶ್ರೀನಗರಕ್ಕೆ ತೆರಳಬೇಕಿದ್ದ ಎಲ್ಲ ವಿಮಾನಗಳ ಹಾರಾಟ ರದ್ದಾಗಿದ್ದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಶ್ರೀನಗರ ಪ್ರವಾಸ ನಿಂತುಹೋಗಿದೆ. ಬೆಳಗ್ಗೆ 09.15ರ ವಿಮಾನದಲ್ಲಿ ಸಿದ್ದರಾಮಯ್ಯ ಶ್ರೀನಗರಕ್ಕೆ ಪ್ರಯಾಣ ಬೆಳೆಸಬೇಕಿತ್ತು. ಇದಕ್ಕಾಗಿ ಅವರು ನಿನ್ನೆ ರಾತ್ರಿ ದೆಹಲಿಗೆ ಆಗಮಿಸಿದ್ದರು. ಹೀಗಾಗಿ ಬೆಳಗ್ಗೆ 8 ಗಂಟೆಗೆ ದೆಹಲಿ ವಿಮಾನ ನಿಲ್ದಾಣಕ್ಜೆ ಸಿದ್ದರಾಮಯ್ಯ ಆಗಮಿಸಿದ್ದರು. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ಮಾಜಿ ಸಚಿವ ವಿನಯ್ ಕುಲಕರ್ಣಿ, ಶಾಸಕರಾದ ನಾಗೇಂದ್ರ, ರಾಘವೇಂದ್ರ ಹಿಟ್ನಾಳ್, ಪ್ರಕಾಶ್ ರಾಥೋಡ್, ಮಾಜಿ ಶಾಸಕರಾದ ಅಶೋಕ್ ಪಟ್ಟಣ, ಐವಾನ್ ಡಿಸೋಜಾ ಜೊತೆಗಿದ್ದರು.
ಮಧ್ಯಾಹ್ನ 12 ಗಂಟೆಗೆ ನಡೆಯಲಿರುವ ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಸಿದ್ದರಾಮಯ್ಯ ಅವರು ಶ್ರೀನಗರಕ್ಕೆ ಪ್ರಯಾಣ ಬೆಳೆಸಬೇಕಿತ್ತು. ಶ್ರೀನಗರದಲ್ಲಿ ಹವಾಮಾನ ವೈಪರೀತ್ಯ ಉಂಟಾಗಿರುವ ಕಾರಣ ದೆಹಲಿ, ಶ್ರೀನಗರ ನಡುವಣ ಎಲ್ಲ ವಿಮಾನಗಳ ಹಾರಾಟ ರದ್ದಾಗಿದೆ. ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿಗಳ ಪ್ರವಾಸವನ್ನು ಮೊಟಕುಗೊಳಿಸಲಾಗಿದೆ.
ಇದನ್ನೂ ಓದಿ: ಭಾರತ್ ಜೋಡೋ ಇಂದು ಶ್ರೀನಗರದಲ್ಲಿ ಸಮಾರೋಪ; ಪಕ್ಷದ ಮುಖ್ಯ ಕಚೇರಿಯಲ್ಲಿ ಧ್ವಜಾರೋಹಣ, ರ್‍ಯಾಲಿ