ಶೋಪಿಯಾನ್(ಜಮ್ಮು ಕಾಶ್ಮೀರ): ಶೋಪಿಯಾನ್‌ನಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್‌ಕೌಂಟರ್ ನಡೆದಿದ್ದು, ಪೊಲೀಸರು ಮತ್ತು ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆ ನಡೆಸುತ್ತಿವೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಕಾಶ್ಮೀರ್ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.
ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಇಮಾಮ್ ಸಾಹಿಬ್ ಪ್ರದೇಶದ ಹರಿಪೋರಾ ಗ್ರಾಮದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ಆರಂಭವಾಗಿದೆ. ಪೊಲೀಸ್, ರಾಷ್ಟ್ರೀಯ ರೈಫಲ್ಸ್ ಮತ್ತು ಸಿಆರ್ಪಿಎಫ್ ಜಂಟಿ ತಂಡದಿಂದ ಕಾರ್ಯಾಚರಣೆ ನಡೆಸಲಾಗುತ್ತಿದೆ. ಉಗ್ರರ ಇರುವಿಕೆಯ ಬಗ್ಗೆ ನಿಖರ ಮಾಹಿತಿ ಸಿಕ್ಕ ನಂತರ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಭದ್ರತಾ ಪಡೆಗಳ ಜಂಟಿ ತಂಡವು ಸ್ಥಳವನ್ನು ಸಮೀಪಿಸುತ್ತಿದ್ದಂತೆ, ಉಗ್ರರು ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.
ಪುಲ್ವಾಮಾ ಜಿಲ್ಲೆಯಲ್ಲಿ ಬುಧವಾರ ಭದ್ರತಾ ಪಡೆಗಳೊಂದಿಗೆ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ವಿವಿಧ ಭಯೋತ್ಪಾದಕ ಸಂಘಟನೆಗಳಿಗೆ ಸೇರಿದ ಇಬ್ಬರು ಉಗ್ರರು ಹತರಾಗಿದ್ದರು. ಅನ್ಸಾರ್ ಘಜ್ವತ್-ಉಲ್-ಹಿಂದ್ ಸಂಘಟನೆಯ ಸಫತ್ ಮುಜಾಫರ್ ಸೋಫಿ ಮತ್ತು ಎಲ್ಇಟಿ ಉಗ್ರ ಉಮರ್ ತೇಲಿ ಎಂಬುವರನ್ನು ಟ್ರಾಲ್ ಪ್ರದೇಶದಲ್ಲಿ ಹತ್ಯೆ ಮಾಡಲಾಗಿತ್ತು. ಈ ಇಬ್ಬರೂ ಶ್ರೀನಗರ ನಗರದಲ್ಲಿ ಹಲವಾರು ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿದ್ದರು. ಖಾನ್ಮೋಹ್ನಲ್ಲಿ ಸರಪಂಚ್ ಸಮೀರ್ ಅಹ್ಮದ್ ಹತ್ಯೆಯಲ್ಲಿ ಇವರು ಭಾಗಿಯಾಗಿದ್ದರು ಎಂದು ಕಾಶ್ಮೀರ್ ಐಜಿಪಿ ಟ್ವೀಟ್ ಮಾಡಿದ್ದರು.
ಇದನ್ನೂ ಓದಿ: ಸೇನೆ ಸೇರುವ ತವಕ: ತ್ರಿವರ್ಣ ಧ್ವಜ ಹಿಡಿದು ರಾಜಸ್ಥಾನದಿಂದ ದೆಹಲಿಗೆ ಓಡಿಬಂದ ಯುವಕ