ನವದೆಹಲಿ: ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 8ರಂದು ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪುತ್ರ ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿತ್ತು. ಆದರೆ, ರಾಹುಲ್ ಗಾಂಧಿ ವಿದೇಶದಲ್ಲಿರುವ ಕಾರಣ ವಿಚಾರಣೆಗೆ ಹಾಜರಾಗಲು ಕೊಂಚ ಸಮಯವಕಾಶ ನೀಡುವಂತೆ ಕೋರಿದ್ದರು. ಇದರ ಬೆನ್ನಲ್ಲೇ ಜಾರಿ ನಿರ್ದೇಶನಾಲಯ ಹೊಸ ದಿನಾಂಕ ನಿಗದಿ ಪಡಿಸಿ, ಸಮನ್ಸ್ ಜಾರಿ ಮಾಡಿದೆ.
ಜಾರಿ ನಿರ್ದೇಶನಾಲಯದ ಹೊಸ ದಿನಾಂಕದ ಪ್ರಕಾರ ರಾಹುಲ್ ಗಾಂಧಿಗೆ ಜೂನ್ 13ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿಲಾಗಿದೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ಸಮನ್ಸ್ ಜಾರಿಯಾಗುತ್ತಿದ್ದಂತೆ ಸೋನಿಯಾ ಗಾಂಧಿ ಹೇಳಿದ ದಿನಾಂಕದಂದು ಅಗತ್ಯವಿದ್ದಲ್ಲಿ ಹಾಜರಾಗುತ್ತಾರೆ. ಆದರೆ, ಪಕ್ಷವು ತನಿಖಾ ಸಂಸ್ಥೆಗೆ ಪತ್ರ ಬರೆದು ರಾಹುಲ್ ಗಾಂಧಿಗೆ ಕಾಲಾವಕಾಶ ನೀಡುವಂತೆ ಕೋರಲಾಗುವುದು ಎಂದು ಸುರ್ಜೇವಾಲ್ ತಿಳಿಸಿದ್ದರು. ಇದರ ಬೆನ್ನಲ್ಲೇ ತನಿಖಾ ಸಂಸ್ಥೆ ಹೊಸ ದಿನಾಂಕ ನೀಡಿ, ಸಮನ್ಸ್ ಜಾರಿಗೊಳಿಸಿದೆ.
ಇದನ್ನೂ ಓದಿ: ನ್ಯಾಷನಲ್ ಹೆರಾಲ್ಡ್ ಕೇಸ್: ಸೋನಿಯಾ ಗಾಂಧಿ, ಪುತ್ರ ರಾಹುಲ್ಗೆ ಸಮನ್ಸ್
ಏನಿದು ನ್ಯಾಷನಲ್ ಹೆರಾಲ್ಡ್ ಕೇಸ್?: ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಹಾಗೂ ಇತರೆ ಸ್ವಾತಂತ್ರ್ಯ ಹೋರಾಟಗಾರರು ಸೇರಿ 1938ರಲ್ಲಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಹುಟ್ಟುಹಾಕಿದ್ದರು. ಸ್ವಾತಂತ್ರ್ಯದ ಬಳಿಕ ಇದು ಕಾಂಗ್ರೆಸ್ ಮುಖವಾಣಿಯಾಗಿ ಬದಲಾವಣೆಯಾಗಿತ್ತು. ಈ ಪತ್ರಿಕೆಯ ಷೇರು ಮಾರಾಟ ಮಾಡಲಾಗಿತ್ತು. 2012ರಲ್ಲಿ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಭಾರೀ ಪ್ರಮಾಣದ ಅವ್ಯವಹಾರ ನಡೆದಿದೆ ಎಂದು ಭಾರತೀಯ ಜನತಾ ಪಕ್ಷದ ನಾಯಕ ಸುಬ್ರಮಣ್ಯನ್ ಸ್ವಾಮಿ ದೂರು ದಾಖಲಿಸಿದ್ದರು.2015ರಲ್ಲಿ ತನಿಖಾ ಸಂಸ್ಥೆಯಿಂದ ಮುಕ್ತಾಯವಾಗಿದ್ದ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಮೂರು ದಿನಗಳ ಹಿಂದೆ ಸಮನ್ಸ್ ನೀಡಿತ್ತು.
ಜೂನ್ 8ರಂದು ವಿಚಾರಣೆಗೆ ಸೋನಿಯಾ ಗಾಂಧಿ ಹಾಜರಾಗುವ ಬಗ್ಗೆ ಯಾವುದೇ ರೀತಿಯ ಮಾಹಿತಿ ಲಭ್ಯವಾಗಿಲ್ಲ. ಅವರಿಗೆ ಕೋವಿಡ್ ಸೋಂಕು ಕಾಣಿಸಿಕೊಂಡಿರುವ ಕಾರಣ, ಪ್ರತ್ಯೇಕವಾಸದಲ್ಲಿದ್ದಾರೆ.