ನವದೆಹಲಿ: ಆರ್ಥಿಕ ದುರ್ಬಲ ವರ್ಗದವರಿಗೆ ಶೇ 10 ಮೀಸಲಾತಿ ನೀಡುವ ಸಂವಿಧಾನ ತಿದ್ದುಪಡಿಯನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್ ತೀರ್ಪನ್ನು ಬಿಜೆಪಿ ಶ್ಲಾಘಿಸಿದೆ. ಇದು ದೇಶದ ಬಡವರಿಗೆ ಸಾಮಾಜಿಕ ನ್ಯಾಯ ಒದಗಿಸುವ ಪ್ರಧಾನಿ ನರೇಂದ್ರ ಮೋದಿಯವರ ಮಿಷನ್ಗೆ ಸಿಕ್ಕ ಜಯ ಎಂದು ಹೇಳಿದೆ.
ಮೀಸಲಾತಿ ಸಿಗದ ಆರ್ಥಿಕ ದುರ್ಬಲ ವರ್ಗಗಳಿಗೆ ಮೀಸಲಾತಿ ನೀಡುವ ಕಾನೂನನ್ನು ಸುಪ್ರೀಂ ಕೋರ್ಟ್ ಇಂದು ಎತ್ತಿಹಿಡಿದಿದೆ. ಬಡವರ ಏಳಿಗೆ ಸಾಧಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಉದ್ದೇಶಕ್ಕೆ ಮತ್ತೊಂದು ಶ್ರೇಯಸ್ಸು ಸಿಕ್ಕಿದೆ. ಸಾಮಾಜಿಕ ನ್ಯಾಯ ಒದಗಿಸುವಲ್ಲಿ ಇದೊಂದು ದೊಡ್ಡ ಹೆಜ್ಜೆಯಾಗಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ ಎಲ್ ಸಂತೋಷ್ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ, ಈ ತೀರ್ಪು ಭಾರತದ ಬಡವರಿಗೆ ಸಾಮಾಜಿಕ ನ್ಯಾಯವನ್ನು ಒದಗಿಸುವ ಮೋದಿ ಅವರ ಧ್ಯೇಯಕ್ಕೆ ಮತ್ತೊಂದು ವಿಜಯವಾಗಿದೆ ಎಂದು ಬಣ್ಣಿಸಿದ್ದಾರೆ.
3:2 ರ ಬಹುಮತದ ದೃಷ್ಟಿಕೋನದಿಂದ ಸುಪ್ರೀಂ ಕೋರ್ಟ್, ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ (EWS) ಸೇರಿದ ಜನರಿಗೆ ಶೇ 10 ಮೀಸಲಾತಿಯನ್ನು ಒದಗಿಸುವ 103 ನೇ ಸಂವಿಧಾನದ ತಿದ್ದುಪಡಿಯ ಸಿಂಧುತ್ವವನ್ನು ಎತ್ತಿಹಿಡಿದಿದೆ. ಇಡಬ್ಲ್ಯೂಎಸ್ ಕೋಟಾ ಕಾನೂನು ಸಂವಿಧಾನದ ಮೂಲ ರಚನೆಯನ್ನು ಉಲ್ಲಂಘಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಇದನ್ನೂ ಓದಿ: ಮುಂದುವರೆದ ಜಾತಿಗಳ ಆರ್ಥಿಕ ದುರ್ಬಲ ವರ್ಗಕ್ಕೆ ಶೇ 10 ಮೀಸಲಾತಿ ಎತ್ತಿ ಹಿಡಿದ ಸುಪ್ರೀಂ ಕೋರ್ಟ್