ಲಖನೌ : ಅನಾರೋಗ್ಯದಿಂದ ಬಳಲುತ್ತಿರುವ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರನ್ನು ಭಾನುವಾರ ಸಂಜೆ ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿದೆ.
ಸಿಂಗ್ ಅವರಿಗೆ ಚಿಕಿತ್ಸೆ ನೀಡಲು ನೆಫ್ರಾಲಜಿ, ಕಾರ್ಡಿಯಾಲಜಿ, ನ್ಯೂರಾಲಜಿ, ಎಂಡೋಕ್ರೈನಾಲಜಿ ಮತ್ತು ನ್ಯೂರೋ-ಓಟಾಲಜಿ ವಿಭಾಗಗಳ ತಜ್ಞರ ಸಮಿತಿಯನ್ನು ರಚಿಸಲಾಗಿದೆ ಎಂದು ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ.
ಕಲ್ಯಾಣ್ ಸಿಂಗ್ ಅವರನ್ನು ಆಸ್ಪತ್ರೆಗೆ ಕರೆ ತರುವಾಗ ಅವರ ರಕ್ತದೊತ್ತಡ ಮತ್ತು ಹೃದಯ ಬಡಿತ ಸಹಜವಾಗಿತ್ತು. ಆದರೆ ಪ್ರಜ್ಞೆಯ ಮಟ್ಟವು ಸ್ವಲ್ಪ ಕಡಿಮೆಯಾಗಿತ್ತು. ಅವರಿಗೆ ಈ ಹಿಂದೆ ಇದ್ದ ಕಾಯಿಲೆಗಳನ್ನು ಗಮನದಲ್ಲಿಟ್ಟುಕೊಂಡು ಐಸಿಯುಗೆ ದಾಖಲಿಸಲಾಗಿದೆ ಎಂದು ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ. ಇದಕ್ಕೂ ಮುನ್ನ ಸಿಂಗ್ ಅವರನ್ನು ಡಾ.ರಾಮ್ ಮನೋಹರ್ ಲೋಹಿಯಾ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಿಸಲಾಗಿತ್ತು.
ಓದಿ : ದೇಶದ ಅಭಿವೃದ್ಧಿ ಕಾರ್ಯಗಳು ಮೋದಿಯವರು ಮಾಡಿದ ಪವಾಡದಂತಿವೆ: ರಾಜನಾಥ್ ಸಿಂಗ್
ರಕ್ಷಣಾ ಸಚಿವ ರಾಜನಾಥ್ ಸಿಂಗ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಮತ್ತು ಯುಪಿ ಬಿಜೆಪಿ ಮುಖ್ಯಸ್ಥ ಸ್ವತಂತ್ರ ದೇವ್ ಸಿಂಗ್ ಸೇರಿದಂತೆ ಹಲವು ಗಣ್ಯರು ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ಭೇಟಿ ನೀಡಿ ಕಲ್ಯಾಣ್ ಸಿಂಗ್ ಅವರ ಯೋಗಕ್ಷೇಮ ವಿಚಾರಿಸಿದ್ದರು.