ಘಾಜಿಪುರ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಕೈಹಿಡಿದು ಬಿಜೆಪಿ ತಿರಸ್ಕರಿಸಿದ ಬಂಗಾಳಿಯರಿಗೆ ಕೇಂದ್ರದ ಮೂರು ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಗಡಿಗಳಲ್ಲಿ ಪ್ರತಿಭಟನೆಗೆ ಕುಳಿತಿದ್ದ ರೈತ ಮುಖಂಡರು ಕೃತಜ್ಞತೆ ಸಲ್ಲಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರನ್ನು 'ಸರ್ವಾಧಿಕಾರಿ' ಎಂದು ಕರೆದ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ವಕ್ತಾರ ಜಗ್ತಾರ್ ಸಿಂಗ್ ಬಜ್ವಾ ಅವರು, ರೈತ ವಿರೋಧಿ ಪಕ್ಷವನ್ನು ಆಯ್ಕೆಯಿಂದ ಬದಿಗಿಡುವ ಮೂಲಕ ರಾಜ್ಯದ ಜನರು ಅತ್ಯುತ್ತಮ ಕೆಲಸ ಮಾಡಿದ್ದಾರೆ ಎಂದು ಹೇಳಿದರು.
ಇತ್ತೀಚೆಗೆ ಮುಕ್ತಾಯಗೊಂಡ ಚುನಾವಣೆಯಲ್ಲಿ ಆಯ್ಕೆಯಾದವರನ್ನು ನಾನು ಅಭಿನಂದಿಸುತ್ತೇನೆ. ಅಲ್ಲದೇ, ಮೂರು ವಿವಾದಾತ್ಮಕ ಮಸೂದೆಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಬಂಗಾಳಕ್ಕೆ ಭೇಟಿ ನೀಡಿದ ಕೃಷಿ ಮುಖಂಡರಿಗೆ ನನ್ನ ಕೃತಜ್ಞತೆ ಅರ್ಪಿಸುತ್ತೇನೆ ಎಂದರು.
ರೈತರ ಉತ್ಪಾದನಾ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ 2020, ರೈತ (ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆ ಭರವಸೆ ಹಾಗೂ ಕೃಷಿ ಸೇವೆಗಳ ಕಾಯ್ದೆ 2020 ಮತ್ತು ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆ 2020 ಅನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.