ಸೋನಿಪತ್ (ಹರಿಯಾಣ) : ವಿವಿಧ ಬೇಡಿಕೆಗಳನ್ನು ಪೂರೈಸುವಂತೆ ಒತ್ತಾಯಿಸಿ ರೈತ ಸಂಘಟನೆಗಳು ಮತ್ತೆ ದೆಹಲಿ ಚಲೋ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ. ಎಂಎಸ್ಪಿ ಗ್ಯಾರಂಟಿ ಕಾನೂನು ಜಾರಿ, ಸ್ವಾಮಿನಾಥನ್ ವರದಿ ಜಾರಿ ಮತ್ತು ಭೂ ಸ್ವಾಧೀನ ಕಾಯ್ದೆ- 2013 ಸೇರಿ ವಿವಿಧ ಯೋಜನೆಗಳನ್ನು ಜಾರಿ ಮಾಡುವಂತೆ ಒತ್ತಾಯಿಸಿ ರೈತರು ಪ್ರತಿಭಟನೆಗೆ ಮುಂದಾಗಿದ್ದಾರೆ. ಈ ಸಂಬಂಧ ಉತ್ತರಪ್ರದೇಶ, ಹರಿಯಾಣ, ಪಂಜಾಬ್ನ ರೈತರು ಫೆಬ್ರವರಿ 13ರಂದು ದೆಹಲಿ ಚಲೋ ಹಮ್ಮಿಕೊಂಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಯುವ ರೈತ ಮುಖಂಡ ಅಭಿಮನ್ಯು ಕೋಹರ್, ಕೇಂದ್ರ ಸರ್ಕಾರ ಈ ಹಿಂದೆ ಜಾರಿ ಮಾಡಿದ್ದ ಮೂರು ಕೃಷಿ ಕಾನೂನುಗಳನ್ನು ರೈತರ ಪ್ರತಿಭಟನೆ ನಡೆಸಿದ ಕಾರಣ ರದ್ದು ಮಾಡಿದೆ. ಇದರ ಜೊತೆಗೆ ವಿವಿಧ ಬೇಡಿಕೆಗಳನ್ನು ಪೂರೈಸುವಂತೆ ರೈತರು ಒತ್ತಾಯಿಸಿದ್ದರು. ಆದರೆ, ಕೇಂದ್ರ ಸರ್ಕಾರ ಈ ಬೇಡಿಕೆಗಳನ್ನು ಇದುವರೆಗೆ ಈಡೇರಿಸಿಲ್ಲ. ಈ ಸಂಬಂಧ ಫೆಬ್ರವರಿ 13ರಂದು ದೆಹಲಿ ಚಲೋ ಪ್ರತಿಭಟನೆ ನಡೆಸುತ್ತೇವೆ ಎಂದು ಹೇಳಿದರು.
ಈ ಹಿಂದೆ ಕೇಂದ್ರ ಸರ್ಕಾರವು ಮೂರು ಕೃಷಿ ಮಸೂದೆಗಳನ್ನು ಹಿಂಪಡೆದಿದೆ. ಇದರ ಜೊತೆಗೆ ನಾವು ಕೇಂದ್ರ ಸರ್ಕಾರದ ಮುಂದೆ ಹಲವು ಮಸೂದೆಗಳನ್ನು ಮತ್ತು ವಿವಿಧ ಬೇಡಿಕೆಗಳನ್ನು ಪೂರೈಸುವಂತೆ ಒತ್ತಾಯಿಸಿದ್ದೆವು. ಆದರೆ, ಸರ್ಕಾರ ನಮ್ಮ ಬೇಡಿಕೆಗಳನ್ನು ಬಾಕಿ ಉಳಿಸಿಕೊಂಡಿದ್ದು, ಇದರ ಅನುಷ್ಠಾನ ಮಾಡಿಲ್ಲ. ಈ ಮೂಲಕ ನಾನು ಸರ್ಕಾರಕ್ಕೆ ಒತ್ತಾಯಿಸುವುದೇನೆಂದರೆ, ಎಂಎಸ್ಪಿ ಕಾನೂನನ್ನು ಜಾರಿ ಮಾಡಬೇಕು ಎಂದರು.
ಜೊತೆಗೆ ಸರ್ಕಾರವು ಸ್ವಾಮಿನಾಥನ್ ವರದಿ ಹಾಗೂ ಭೂಸ್ವಾಧೀನ ಮಸೂದೆ - 2013ನ್ನು ಜಾರಿ ಮಾಡಬೇಕಿತ್ತು. ಆದರೆ, ಕೇಂದ್ರ ಸರ್ಕಾರ ಯಾವುದನ್ನೂ ಗಂಭೀರವಾಗಿ ಪರಿಗಣಿಸಿಲ್ಲ. ಈ ಎಲ್ಲ ಬೇಡಿಕೆಗಳನ್ನು ಈಡೇರಿಸುವವರೆಗೆ ನಾವು ಪ್ರತಿಭಟನೆ ನಡೆಸುತ್ತೇವೆ. ಪ್ರತಿಭಟನೆಗೂ ಮುನ್ನ ಚಂಡೀಗಢದ ಎಲ್ಲ ರೈತ ಸಂಘಟನೆಗಳು ಒಟ್ಟಾಗಿ ಪ್ರತಿಭಟನೆಯ ರೂಪುರೇಷೆಗಳನ್ನು ನಿರ್ಧರಿಸುತ್ತೇವೆ ಎಂದು ಹೇಳಿದರು.
2020 ನವೆಂಬರ್ 26ರಂದು ಮೂರು ಕೃಷಿ ಮಸೂದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ರೈತ ಸಂಘಟನೆಗಳು ದೆಹಲಿಯ ರಾಮಲೀಲಾ ಮೈದಾನದಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದವು. ಈ ವೇಳೆ, ದೆಹಲಿಗೆ ಬರುತ್ತಿದ್ದ ರೈತರನ್ನು ಪೊಲೀಸರು ಅಲ್ಲೇ ತಡೆದಿದ್ದರು. ಬಳಿಕ ರೈತರ ಪ್ರತಿಭಟನೆಗೆ ಮಣಿದು ಕೇಂದ್ರ ಸರ್ಕಾರ ಮೂರು ಕೃಷಿ ಕಾನೂನುಗಳನ್ನು ವಾಪಸ್ ಪಡೆದಿತ್ತು.
ಇದನ್ನೂ ಓದಿ : ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಪೊಲೀಸ್ ಇನ್ಸ್‌ಪೆಕ್ಟರ್‌ಗಳ ಸಾವು