ಮಥುರಾ : ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಉತ್ತರಪ್ರದೇಶ ಉಸ್ತುವಾರಿ ಪ್ರಿಯಾಂಕಾ ಗಾಂಧಿಯವರ ಬೆಂಗಾವಲು ವಾಹನ ಡಿಕ್ಕಿ ಹೊಡೆದು ಮಹಿಳಾ ಕಾರ್ಯಕರ್ತೆಯೋರ್ವರು ಗಾಯಗೊಂಡಿರುವ ಘಟನೆ ನಡೆದಿದೆ.
ಉತ್ತರಪ್ರದೇಶದ ಫಿರೋಜಾಬಾದ್‌ನಲ್ಲಿ ಆಯೋಜಿಸಿದ್ದ ಮಹಿಳಾ ಸಮಾವೇಶದಲ್ಲಿ ಭಾಗವಹಿಸಲು ಪ್ರಿಯಾಂಕಾ ನವದೆಹಲಿಯಿಂದ ತೆರಳುತ್ತಿದ್ದರು. ಮಾಹಿತಿ ತಿಳಿದ ತಕ್ಷಣ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಟೋಲ್ ಫ್ಲಾಜಾದಲ್ಲಿ ಪ್ರಿಯಾಂಕಾ ಗಾಂಧಿಗೆ ಅದ್ಧೂರಿ ಸ್ವಾಗತ ಕೋರಿದರು.
ಈ ವೇಳೆ ಪ್ರಿಯಾಂಕಾರವರ ಬೆಂಗಾವಲು ವಾಹನ ಮಹಿಳಾ ಕಾರ್ಯಕರ್ತೆಯೋರ್ವರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಮಹಿಳೆ ಗಾಯಗೊಂಡು ರಸ್ತೆಯಲ್ಲಿಯೇ ನರಳಾಡುತ್ತಿದ್ದರು. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಗಾಯಗೊಂಡ ಮಹಿಳೆ ಅಶ್ರಫಿ ದೇವಿ ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾ ಉಪಾಧ್ಯಕ್ಷೆ ಮತ್ತು ಮಥುರಾದ ಸಂಜಯ್ ನಗರದ ನಿವಾಸಿ ಎಂದು ತಿಳಿದು ಬಂದಿದೆ.