ನವದೆಹಲಿ: ದಕ್ಷಿಣ ದೆಹಲಿಯ ಲಜಪತ್ ನಗರದ ಸೆಂಟ್ರಲ್ ಮಾರ್ಕೆಟ್ ಪ್ರದೇಶದ ಬಟ್ಟೆ ಶೋ ರೂಂನಲ್ಲಿ ಇಂದು ಬೆಳಗ್ಗೆ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ 30 ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಸುಮಾರು ನೂರು ಮಂದಿ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಶೋ ರೂಗೆ ತಗುಲಿದ ಬೆಂಕಿ ಬಳಿಕ ಸಮೀಪದ ಅನೇಕ ಅಂಗಡಿಗಳಿಗೂ ಆವರಿಸಿದೆ. ಸದ್ಯ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗುತ್ತಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ದೆಹಲಿ ಅಗ್ನಿಶಾಮಕ ಇಲಾಖೆಯ ನಿರ್ದೇಶಕ ಅತುಲ್ ಗಾರ್ಗ್ ತಿಳಿಸಿದ್ದಾರೆ.
ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಪರಿಹಾರ ಮತ್ತು ರಕ್ಷಣಾ ಕಾರ್ಯಗಳು ನಡೆಯುತ್ತಿದ್ದು, ನಾನು ನಿರಂತರವಾಗಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದೇನೆ. ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇನೆ ಎಂದು ಹೇಳಿದ್ದಾರೆ.