ಚಿತ್ರದುರ್ಗ: ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ದುರಂತ ಘಟನೆಯೊಂದು ಸಂಭವಿಸಿದೆ. ಇಂದು ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವುದು ತಿಳಿದುಬಂದಿದೆ. ಈ ಅಪಘಾತ ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಬಳಿ ಸಂಭವಿಸಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಸಪೇಟೆ ಕಡೆಯಿಂದ ತುಮಕೂರಿಗೆ ತೆರಳುತ್ತಿದ್ದ ವೇಳೆ ಕಾರೊಂದು ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಈ ದುರಂತ ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುದ್ದಿ ತಿಳಿಯುತ್ತಿದ್ದಂತೆ ಚಿತ್ರದುರ್ಗ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈ ಅಪಘಾತ ಕುರಿತು ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೊಸಪೇಟೆ ಕಡೆಯಿಂದ ತುಮಕೂರಿಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಮೃತರನ್ನು ಶಂಶುದ್ದೀನ್ (40), ಮಲ್ಲಿಕಾ (37), ಖಲೀಲ್ (42) ಮತ್ತು ತಬ್ರೇಜ್ (13) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ನರ್ಗೀಸ್, ರೆಹಾನ್, ರೆಹಮಾನ್ರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಎಸ್ಪಿ ಧರ್ಮೇಂದ್ರ ಕುಮಾರ್ ಮಾಹಿತಿ ನೀಡಿದ್ದಾರೆ.
ಓದಿ: Watch - ಟ್ರಾಫಿಕ್ ಜಾಮ್ ಸಮಸ್ಯೆಗೆ ಬೇಸತ್ತು ಫುಟ್ ಓವರ್ ಬ್ರಿಡ್ಜ್ ಮೇಲೆ ಆಟೋ ಓಡಿಸಿದ ಭೂಪ
ಪಿಲಿಭಿತ್ನಲ್ಲಿ ಭೀಕರ ರಸ್ತೆ ಅಪಘಾತ: ಉತ್ತರ ಪ್ರದೇಶದ ಪಿಲಿಭಿತ್ನ ಸಿತಾಪುರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಬೆಳಗ್ಗೆ ಭಯಾನಕ ರಸ್ತೆ ಅಪಘಾತವೊಂದು ಸಂಭವಿಸಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಗಾಯಗೊಂಡವರಲ್ಲಿ ಎಳೆಯ ಮಗುವೂ ಸೇರಿದೆ. ಘಟನೆಯ ವಿಷಯ ತಿಳಿದು ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಾಹಿತಿ ಪ್ರಕಾರ, ಗಾಯಗೊಂಡ ಎಲ್ಲರೂ ಕೂಡಾ ಲಖನೌದದವರಾಗಿದ್ದಾರೆ.
ಸೆರ್ಹಾಮೌ ನಾರ್ತ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಭಾನುವಾರ ಮುಂಜಾನೆ ಲಖನೌ ಕಡೆಯಿಂದ ಪಿಲಿಭಿತ್ ಕಡೆಗೆ ಸಂಚರಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿ ನಿಲ್ಲಿಸಲಾಗಿದ್ದ ಪಿಕ್ಅಪ್ಗೆ ಗುದ್ದಿದೆ. ಅಪಘಾತದ ರಭಸಕ್ಕೆ ಕಾರಿನ ಮೇಲ್ಭಾಗ ಹಾರಿಹೋಗಿದೆ. ಕಾರಿನಲ್ಲಿದ್ದ ಮೂವರು ಮಹಿಳೆಯರು ಸೇರಿ ನಾಲ್ವರು ಘಟನಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಇತರರು ಗಂಭೀರವಾಗಿ ಗಾಯಗೊಂಡಿದ್ದರು. ರಸ್ತೆ ಅಪಘಾತದ ಬಗ್ಗೆ ಮಾಹಿತಿ ತಿಳಿದುಬರುತ್ತಿದ್ದಂತೆ ಸ್ಥಳೀಯ ಜನರು ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ. ನಂತರ ಈ ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾರೆ.
ಈ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಮಾತನಾಡಿದ ಪೊಲೀಸ್ ಅಧಿಕಾರಿ ಮದನ್ ಮೋಹನ್ ಚತುರ್ವೇದಿ, ಘಟನಾ ಸ್ಥಳದಲ್ಲಿ ನಾಲ್ವರು ದಾರುಣವಾಗಿ ಮೃತಪಟ್ಟಿದ್ದಾರೆ. ಈಗಾಗಲೇ ಮೃತದೇಹವನ್ನು ವಶಕ್ಕೆ ತೆಗೆದುಕೊಂಡಿದ್ದು, ಪೋಸ್ಟ್ಮಾರ್ಟಮ್ಗಾಗಿ ಕಳುಹಿಸಲಾಗಿದೆ. ಆಂಬ್ಯುಲೆನ್ಸ್ ಸಹಾಯದಿಂದ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿಸಿದ್ದಾರೆ.