ಫರೂಕಾಬಾದ್ (ಉತ್ತರ ಪ್ರದೇಶ): ಉತ್ತರ ಪ್ರದೇಶದಲ್ಲಿ ಮತ್ತೊಂದು ಹೀನ ಕೃತ್ಯ ಬೆಳಕಿಗೆ ಬಂದಿದೆ. ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆಯಾಗಿ ಮತ್ತೆ ಸಂತ್ರಸ್ತೆಗೆ ಬೆದರಿಕೆ ಮತ್ತು ಚಿತ್ರಹಿಂಸೆ ಕೊಟ್ಟಿದ್ದಾರೆ. ಇದರಿಂದ ನೊಂದ ಸಂತ್ರಸ್ತೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಯತ್ನಿಸಿದ ಘಟನೆ ಫರೂಕಾಬಾದ್ ಜಿಲ್ಲೆಯಲ್ಲಿ ನಡೆದಿದೆ.
ಸುಮಾರು 20 ತಿಂಗಳ ಹಿಂದೆ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿತ್ತು. ಈ ಪ್ರಕರಣದ ಆರೋಪಿಗಳಾದ ಅಂಕಿತ್ ಮತ್ತು ಶುಭಂ ಎಂಬುವರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು. ಆದರೆ, ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಈ ದುರುಳರು ಸಂತ್ರಸ್ತೆಗೆ ಮತ್ತೆ ಕಿರುಕುಳ ನೀಡಲು ಆರಂಭಿಸಿದ್ದರು ಎಂದು ಹೇಳಲಾಗ್ತಿದೆ.
ಇದರಿಂದ ಬೇಸತ್ತ ಸಂತ್ರಸ್ತೆ ನ.4ರಂದು ಮೈಮೇಲೆ ಡೀಸೆಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾಳೆ. ಘಟನೆಯ ನಂತರ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ದೂರು ನೀಡಲಾಗಿತ್ತು. ಆದರೂ, ಆರೋಪಿಗಳು ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಲು ಮುಂದಾಗಿಲ್ಲ ಎಂದು ಸಂಬಂಧಿಕರು ಆರೋಪಿಸಿದ್ದಾರೆ.
ಸದ್ಯ ಸಂತ್ರಸ್ತೆ ಗಂಭೀರ ಸ್ಥಿತಿಯಲ್ಲಿದ್ದು, ಜೀವನ್ಮರಣ ಹೋರಾಟ ನಡೆಸುತ್ತಿದ್ದಾಳೆ. ಕಳೆದ 11 ದಿನಗಳಿಂದ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿ ಖರ್ಚು ಮಾಡಲಾಗಿದೆ. ಆದರೂ, ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಸಂಬಂಧಿಕರು ತಿಳಿಸಿದ್ದಾರೆ. ಇದೀಗ 12 ದಿನಗಳ ಬಳಿಕ ಈ ವಿಷಯ ಎಸ್‌ಪಿ ಅಶೋಕ್ ಕುಮಾರ್ ಮೀನಾ ನಮನಕ್ಕೆ ಬಂದಿದ್ದು, ಎಫ್ಐಆರ್ ದಾಖಲಿಸಲಾಗಿದೆ. ಅಲ್ಲದೇ, ಆರೋಪಿಗಳ ಪತ್ತೆಗೆ ಮೂರು ತಂಡಗಳನ್ನು ರಚಿಸುವ ಮೂಲಕ ದುರುಳರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಇದನ್ನೂ ಓದಿ: 6 ವರ್ಷದಿಂದ ಕುಟುಂಬದಿಂದಲೇ ಲೈಂಗಿಕ ದೌರ್ಜನ್ಯ.. 17 ವರ್ಷದ ಬಾಲಕಿ ಸ್ಥಿತಿ ಗಂಭೀರ ಆರೋಪ