ಅಹಮದಾಬಾದ್ (ಗುಜರಾತ್): 2002ರ ಗೋಧ್ರಾ ನಂತರದ ಗಲಭೆ ಪ್ರಕರಣಗಳಲ್ಲಿ ಅಮಾಯಕರನ್ನು ಸಿಲುಕಿಸಲು ಸುಳ್ಳು ಸಾಕ್ಷ್ಯಗಳನ್ನು ಸೃಷ್ಟಿಸಿದ ಆರೋಪ ಎದುರಿಸುತ್ತಿರುವ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಜಾಮೀನು ಅರ್ಜಿಯನ್ನು ಶನಿವಾರ ಗುಜರಾತ್ ಹೈಕೋರ್ಟ್ ತಿರಸ್ಕರಿಸಿದ್ದು, ಕೂಡಲೇ ಶರಣಾಗುವಂತೆ ಸೂಚಿಸಿದೆ. ಸುಪ್ರೀಂ ಕೋರ್ಟ್ ನೀಡಿರುವ ಮಧ್ಯಂತರ ಜಾಮೀನಿನ ಮೇಲೆ ಅರ್ಜಿದಾರರು ಹೊರಗಿರುವುದರಿಂದ ತಕ್ಷಣವೇ ಶರಣಾಗುವಂತೆ ಸೂಚಿಸಲಾಗಿದೆ ಎಂದು ನ್ಯಾಯಾಲಯ ತನ್ನ ಆದೇಶದಲ್ಲಿ ತಿಳಿಸಿದೆ.
ಕಳೆದ ವರ್ಷ ಜೂನ್ 25ರಂದು ಗುಜರಾತ್‌ನ ಮಾಜಿ ಪೊಲೀಸ್ ಮಹಾನಿರ್ದೇಶಕ ಆರ್‌ಬಿ ಶ್ರೀಕುಮಾರ್ ಮತ್ತು ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಹಾಗೂ ತೀಸ್ತಾ ಸೆಟಲ್ವಾಡ್ ಅವರನ್ನು ಗುಜರಾತ್ ಪೊಲೀಸರು ಬಂಧಿಸಿದ್ದರು. ಮುಂಬೈನಲ್ಲಿ ವಶಕ್ಕೆ ಪಡೆದು ಕರೆದುಕೊಂಡು ಹೋಗಿದ್ದರು. ಜುಲೈ 30ರಂದು ಅಹಮದಾಬಾದ್‌ನ ಸೆಷನ್ಸ್ ನ್ಯಾಯಾಲಯವು ತೀಸ್ತಾ ಮತ್ತು ಶ್ರೀಕುಮಾರ್ ಜಾಮೀನು ಅರ್ಜಿಗಳನ್ನು ತಿರಸ್ಕರಿಸಿತ್ತು.
ಇದನ್ನೂ ಓದಿ: ತೀಸ್ತಾ ಸೆಟಲ್ವಾಟ್ರನ್ನು ವಶಕ್ಕೆ ಪಡೆದ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ
ಬಳಿಕ ಆಗಸ್ಟ್ 3ರಂದು ತೀಸ್ತಾ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಿದ್ದರು. ಆಗ ಈ ಅರ್ಜಿಯ ಕುರಿತು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿತ್ತು. ಏತನ್ಮಧ್ಯೆ ಹೈಕೋರ್ಟ್ ತನ್ನ ಮನವಿಯನ್ನು ಪರಿಗಣಿಸಲು ನಿರಾಕರಿಸಿದ ನಂತರ ತೀಸ್ತಾ ಮಧ್ಯಂತರ ಜಾಮೀನಿಗಾಗಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಸೆಪ್ಟೆಂಬರ್ 2ರಂದು ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಇದೇ ವೇಳೆ, ಗುಜರಾತ್ ಹೈಕೋರ್ಟ್ ತೀಸ್ತಾ ಜಾಮೀನು ಅರ್ಜಿಯನ್ನು ನಿರ್ಧರಿಸುವವರೆಗೆ ಪಾಸ್‌ಪೋರ್ಟ್ ಅನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸೂಚಿಸಿತ್ತು. ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಸೆಪ್ಟೆಂಬರ್ 3ರಂದು ಸಬರಮತಿ ಜೈಲಿನಿಂದ ಬಿಡುಗಡೆಗೊಂಡ ತೀಸ್ತಾ ಸದ್ಯ ಹೊರಗಡೆ ಇದ್ದಾರೆ.
ಇದನ್ನೂ ಓದಿ: ತೀಸ್ತಾ ಸೆಟಲ್ವಾಡ್ಗೆ ಮಧ್ಯಂತರ ಜಾಮೀನು: ಪಾಸ್‌ಪೋರ್ಟ್ ಒಪ್ಪಿಸಲು ಸುಪ್ರೀಂಕೋರ್ಟ್ ಸೂಚನೆ
ಮತ್ತೆ ಸುಪ್ರೀಂ ಮೊರೆ ಹೋದ ತೀಸ್ತಾ: ಇದೀಗ ಮತ್ತೆ ತೀಸ್ತಾ ಸೆಟಲ್ವಾಡ್ ಅರ್ಜಿ ಗುಜರಾತ್ ಹೈಕೋರ್ಟ್ ಮುಂದೆ ಬಂದಿತ್ತು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಿರ್ಜರ್ ದೇಸಾಯಿ ಅವರ ಪೀಠ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಇದರ ಬೆನ್ನಲ್ಲೇ ತೀಸ್ತಾ ಸೆಟಲ್ವಾಡ್ ಮತ್ತೆ ಸುಪ್ರೀಂ ಕೋರ್ಟ್ ಮೊರೆ ಹೋದರು. ವಿಶೇಷ ವಿಚಾರಣೆಯಲ್ಲಿ ಅರ್ಜಿ ಆಲಿಸಿದ ನ್ಯಾಯಮೂರ್ತಿಗಳಾದ ಅಭಯ್ ಎಸ್.ಓಕಾ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರು ಮಧ್ಯಂತರ ರಕ್ಷಣೆ ನೀಡುವ ಕುರಿತು ವಿಭಿನ್ನ ನಿಲುವು ವ್ಯಕ್ತಪಡಿಸಿದರು. ''ಜಾಮೀನು ನೀಡುವ ಪ್ರಶ್ನೆಯಲ್ಲಿ ನಮ್ಮ ನಡುವೆ ಭಿನ್ನಾಭಿಪ್ರಾಯವಿದೆ. ಆದ್ದರಿಂದ ಈ ವಿಷಯವನ್ನು ಉನ್ನತ ಪೀಠಕ್ಕೆ ನಿಯೋಜಿಸುವಂತೆ ನಾವು ಮುಖ್ಯ ನ್ಯಾಯಮೂರ್ತಿಗಳನ್ನು ಕೋರುತ್ತೇವೆ'' ಎಂದು ನ್ಯಾಯಮೂರ್ತಿಗಳು ಹೇಳಿದರು.
ಗೋದ್ರೋತ್ತರ ಗಲಭೆ ಪ್ರಕರಣದಲ್ಲಿ ತೀಸ್ತಾ ಮತ್ತು ಇತರ ಇಬ್ಬರ ವಿರುದ್ಧ ಸುಳ್ಳು ಸಾಕ್ಷ್ಯಾಧಾರಗಳ ಸೃಷ್ಟಿಸಿದ ಆರೋಪ ಮೇಲೆ ಎಫ್ಐಆರ್ ದಾಖಲಾಗಿದೆ. ಗಲಭೆ ಸಂದರ್ಭದಲ್ಲಿ ಗುಜರಾತ್ ಮುಖ್ಯಮಂತ್ರಿ ಆಗಿದ್ದ ನರೇಂದ್ರ ಮೋದಿ ಅವರಿಗೆ ವಿಶೇಷ ತನಿಖಾ ತಂಡ ಕ್ಲೀನ್ ಚಿಟ್ ಪ್ರಶ್ನಿಸಿ ಸಲ್ಲಿಸಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು. ಇದರ ಮರು ದಿನವೇ ಅಹಮದಾಬಾದ್ ಅಪರಾಧ ದಳ ಪೊಲೀಸರು, ತೀಸ್ತಾ ಸೆಟಲ್ವಾಡ್, ಶ್ರೀಕುಮಾರ್ ಮತ್ತು ಸಂಜೀವ್ ಭಟ್ ವಿರುದ್ಧ ಕೇಸ್ ದಾಖಲಿಸಿತ್ತು.
ಇದನ್ನೂ ಓದಿ: ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಜೈಲಿನಿಂದ ಬಿಡುಗಡೆ