ನವದೆಹಲಿ: ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಹರಿದ್ವಾರದಲ್ಲಿ ನಡೆದ ಧರ್ಮ ಸಂಸದ್ ಭಾಷಣಗಳ ಕುರಿತು ಸ್ವತಂತ್ರ ತನಿಖೆಗೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂಕೋರ್ಟ್ ಬುಧವಾರ ವಿಚಾರಣೆ ನಡೆಸಲಿದೆ. ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ಪೀಠ ಬುಧವಾರ ಈ ಪ್ರಕರಣದ ವಿಚಾರಣೆ ನಡೆಸಲಿದೆ.
ಸೋಮವಾರದಂದು, ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್ ಧರ್ಮ ಸಂಸದ್ನ ಭಾಷಣಗಳ ಕುರಿತು ತುರ್ತು ವಿಚಾರಣೆ ಅಗತ್ಯವಿದೆ ಎಂದು ಪ್ರಸ್ತಾಪಿಸಿದ್ದರು. ಹೈಕೋರ್ಟ್‌ನ ಮಾಜಿ ನ್ಯಾಯಾಧೀಶರಾದ ಹಾಗೂ ಹಿರಿಯ ವಕೀಲರಾದ ಅಂಜನಾ ಪ್ರಕಾಶ್ ಮತ್ತು ಪತ್ರಕರ್ತ ಕುರ್ಬಾನ್ ಅಲಿ ಅವರು ಅರ್ಜಿ ಸಲ್ಲಿಸಿದ್ದರು.
ಹರಿದ್ವಾರದಲ್ಲಿ ನಡೆದ ಧರ್ಮ ಸಂಸದ್ ಸಮಾವೇಶದಲ್ಲಿ ಮುಸ್ಲಿಮರ ವಿರುದ್ಧ ಹಿಂಸಾಚಾರಕ್ಕೆ ಪ್ರಚೋದನೆ ನೀಡುವ, ದ್ವೇಷದ ಭಾಷಣಗಳನ್ನು ಮಾಡಿದ ಜನರನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸುವಂತೆ ಅರ್ಜಿಯಲ್ಲಿ ಕೋರಲಾಗಿದೆ.
ಕಪಿಲ್ ಸಿಬಲ್ ವಾದಮಂಡನೆಯ ವೇಳೆ ಭಾರತದ ಘೋಷ ವಾಕ್ಯವು ಸತ್ಯಮೇವ ಜಯತೆ ಇದ್ದು, ಇದು ಶಾಸ್ತ್ರಮೇವ ಜಯತೆ ಎಂದು ಬದಲಾಗುತ್ತಿದೆ. ಇಂತಹ ಅಪಾಯಕಾರಿ ಕಾಲದಲ್ಲಿ ನಾವು ಜೀವಿಸುತ್ತಿದ್ದೇವೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವೆಡೆ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಆದರೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ಸಿಬಲ್ ಹೇಳಿದ್ದರು. 2021ರ ಡಿಸೆಂಬರ್ 17 ಮತ್ತು 19ರ ನಡುವೆ ಹರಿದ್ವಾರದಲ್ಲಿ ಯತಿ ನರಸಿಂಹಾನಂದ್ ಮತ್ತು ಹಲವರು ಪ್ರಚೋದನಕಾರಿ ಭಾಷಣಗಳನ್ನು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ: ಪಂಜಾಬ್ ಸಿಎಂ ಚನ್ನಿ ಸಹೋದರ ಸಂಬಂಧಿ ಜಸ್ವಿಂದರ್ ಬಿಜೆಪಿ ಸೇರ್ಪಡೆ