ಚಂಡೀಗಢ: ಹರಿಯಾಣದ ಸಿರ್ಸಾದಲ್ಲಿರುವ ಚೌಧರಿ ದೇವಿ ಲಾಲ್ ವಿಶ್ವವಿದ್ಯಾಲಯದಲ್ಲಿ ಅಚ್ಚರಿಯ ವಿದ್ಯಮಾನವೊಂದು ಬೆಳಕಿಗೆ ಬಂದಿದೆ. ಇಲ್ಲಿನ ಪ್ರಾಧ್ಯಾಪಕರೊಬ್ಬರು ತಮಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಬರೋಬ್ಬರಿ 500 ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರಿಗೆ ಪತ್ರ ಬರೆದಿದ್ದಾರೆ.
ಪತ್ರದ ಪ್ರತಿಗಳನ್ನು ವಿವಿಯ ಕುಲಪತಿ ಅಜ್ಮೀರ್ ಸಿಂಗ್ ಮಲಿಕ್, ರಾಜ್ಯಪಾಲ ಬಂಡಾರು ದತ್ತಾತ್ರೇಯ, ಗೃಹ ಸಚಿವ ಅನಿಲ್ ವಿಜ್ ಮತ್ತು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಸೇರಿ ಇತರರಿಗೆ ಕಳುಹಿಸಲಾಗಿದೆ. ಪತ್ರದಲ್ಲಿ ಪ್ರಾಧ್ಯಾಪಕನ ಕೊಳಕು ಮತ್ತು ಅಶ್ಲೀಲ ವರ್ತನೆಯನ್ನು ಕುರಿತು ಆರೋಪಿಸಲಾಗಿದೆ.
ವಿದ್ಯಾರ್ಥಿನಿಯರ ಆರೋಪವೇನು?: ವಿವಿಯ ಪ್ರಾಧ್ಯಾಪಕ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದಾರೆ. ವಿದ್ಯಾರ್ಥಿನಿಯರನ್ನು ತಮ್ಮ ಕಚೇರಿಗೆ ಕರೆಸಿಕೊಂಡು, ಸ್ನಾನಗೃಹಕ್ಕೆ ಕರೆದೊಯ್ಯುತ್ತಾರೆ. ಅಲ್ಲಿ ಅಸಭ್ಯವಾಗಿ ನಡೆದುಕೊಳ್ಳುತ್ತಾರೆ. ಖಾಸಗಿ ಅಂಗಗಳನ್ನು ಸ್ಪರ್ಶಿಸುತ್ತಾರೆ. ಇದನ್ನು ಪ್ರತಿಭಟಿಸಿದರೆ ಅತ್ಯಂತ ಕೆಟ್ಟ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕುತ್ತಾರೆ. ಈ ಅನ್ಯಾಯ ಹಲವು ತಿಂಗಳಿಂದ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.
ಕಾಲೇಜಿನಲ್ಲಿ ಹರಿದಾಡಿದ ಪತ್ರ: ಪ್ರಾಧ್ಯಾಪಕರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿರುವ ಪತ್ರ ಕಾಲೇಜಿನಲ್ಲಿ ಹರಿದಾಡಿದೆ. ವಿವಿಯ ರಿಜಿಸ್ಟ್ರಾರ್ ರಾಜೇಶ್ ಕುಮಾರ್ ಬನ್ಸಾಲ್ ಅವರು ಅನಾಮಧೇಯ ಪತ್ರ ದೊರಕಿರುವ ಬಗ್ಗೆ ಖಚಿತಪಡಿಸಿದ್ದಾರೆ. ಇದು ವಿವಿಯಲ್ಲಿ ಸಂಚಲನ ಉಂಟು ಮಾಡಿದೆ.
ಚೌಧರಿ ದೇವಿ ಲಾಲ್ ವಿಶ್ವವಿದ್ಯಾನಿಲಯದ ವಿಸಿ ಅಜ್ಮೀರ್ ಮಲಿಕ್ ಮಾತನಾಡಿ, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ತನಿಖೆಗಾಗಿ 7 ಸದಸ್ಯರ ಸಮಿತಿಯನ್ನು ರಚಿಸಲಾಗಿದೆ. ವಿದ್ಯಾರ್ಥಿನಿಯರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗುತ್ತಿದೆ. ಅನಾಮಧೇಯ ಪತ್ರದ ಬಗ್ಗೆ ತನಿಖೆ ಅಗತ್ಯವಿಲ್ಲ. ಅದನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ತಿಳಿಸಿದ್ದಾರೆ.
ಎಡಿಜಿಪಿ ಶ್ರೀಕಾಂತ್ ಜಾಧವ್ ಮಾತನಾಡಿ, ಪ್ರಕರಣದ ತನಿಖೆ ನಡೆಯುತ್ತಿದೆ. ಎಎಸ್ಪಿ ದೀಪ್ತಿ ಗಾರ್ಗ್ ನೇತೃತ್ವದಲ್ಲಿ ತನಿಖಾ ಸಮಿತಿಯನ್ನು ರಚಿಸಲಾಗಿದೆ. ವಿದ್ಯಾರ್ಥಿಗಳ ಹೇಳಿಕೆಗಳನ್ನು ಪಡೆಯಲಾಗುತ್ತಿದೆ. ಅವರು ನೀಡಿದ ಮಾಹಿತಿಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು. ತನಿಖಾ ತಂಡ ಈಗಾಗಲೇ ವಿಚಾರಣೆ ಕೈಗೆತ್ತಿಕೊಂಡಿದೆ. ಕಾಲೇಜಿನಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಮೇಲೆ ನಿಗಾ ವಹಿಸಲಾಗಿದೆ. ಶೀಘ್ರವೇ ತನಿಖೆಯಿಂದ ಸತ್ಯಾಸತ್ಯತೆ ಹೊರಬರಲಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಇಸ್ರೇಲ್ ಯುದ್ಧ: ದಾಳಿಯಲ್ಲಿ 23 ಸಾವಿರ ಪ್ಯಾಲೆಸ್ಟೈನಿಯನ್ನರ ಸಾವು, 59 ಸಾವಿರ ಜನ ಗಾಯಾಳು