ನವದೆಹಲಿ: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿರುವ ಮಹತ್ವದ ತೀರ್ಪಿನ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಮುಂದಿನ ವಾರ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸಮ್ಮತಿಸಿದೆ. ಹೈಕೋರ್ಟ್ ಮಾರ್ಚ್ 15ರಂದು ಹಿಜಾಬ್ ಧರಿಸುವುದು ಇಸ್ಲಾಂನ ಅಗತ್ಯ ಆಚರಣೆಯಡಿ ಬರುವುದಿಲ್ಲ ಎಂದು ಐತಿಹಾಸಿಕ ತೀರ್ಪು ನೀಡಿತ್ತು.
ವಕೀಲ ಪ್ರಶಾಂತ್ ಭೂಷಣ್ ಅವರು ಹಿಜಾಬ್ ವಿವಾದದ ಕುರಿತು ಮಾರ್ಚ್‌ನಲ್ಲೇ ಅರ್ಜಿ ಸಲ್ಲಿಸಲಾಗಿದ್ದು, ವಿಚಾರಣೆ ವಿಳಂಬವಾಗುತ್ತಿದೆ ಎಂದು ಪ್ರಸ್ತಾಪಿಸಿದಾಗ, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಪೀಠವು ಮುಂದಿನ ವಾರದಿಂದ ವಿಚಾರಣೆ ನಡೆಸುವುದಾಗಿ ಹೇಳಿದೆ.
ಪ್ರಕರಣದ ಹಿನ್ನೆಲೆ: ಈ ವರ್ಷದ ಜನವರಿಯಲ್ಲಿ ಉಡುಪಿ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜಿಗೆ ಕೆಲವು ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬರುವುದನ್ನು ವಿರೋಧಿಸಿ ಕೆಲವು ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿಕೊಂಡು ಬರುವ ಮೂಲಕ ವಿವಾದ ಸೃಷ್ಟಿಯಾಗಿತ್ತು. ನಂತರ ರಾಜ್ಯ, ದೇಶಾದ್ಯಂತ ಹಿಜಾಬ್ ಪರ ಮತ್ತು ವಿರೋಧ ಪ್ರತಿಭಟನೆ, ಚರ್ಚೆಗಳು ನಡೆದಿದ್ದವು.
ತರಗತಿಗೆ ಹಿಜಾಬ್ ಧರಿಸಿ ಹಾಜರಾಗುವುದಕ್ಕೆ ನಿರ್ಬಂಧಿಸಿರುವ ಕ್ರಮ ಪ್ರಶ್ನಿಸಿ ಆರು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದರು. ಬಳಿಕ ಫೆ.5ರಂದು ರಾಜ್ಯ ಸರ್ಕಾರ ಸಮವಸ್ತ್ರ ಕಡ್ಡಾಯಗೊಳಿಸಿ ಆದೇಶ ಹೊರಡಿಸಿತ್ತು. ಅಲ್ಲದೇ, ಈ ವಿವಾದ ಹೈಕೋರ್ಟ್ ಮೆಟ್ಟಿಲೇರಿತ್ತು. ಹಿಜಾಬ್ ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ವಿದ್ಯಾರ್ಥಿನಿಯರು ಸೇರಿದಂತೆ, ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ನ್ಯಾಯಾಲಯಕ್ಕೆ ಸಲ್ಲಿಕೆಯಾಗಿದ್ದವು. ಆರಂಭದಲ್ಲಿ ಈ ವಿವಾದದ ವಿಚಾರಣೆಯನ್ನು ಹೈಕೋರ್ಟ್‌ನ ಏಕಸದಸ್ಯ ಪೀಠ ನಡೆಸುತ್ತಿತ್ತು.
ನಂತರ ವಿಸ್ತೃತ ಪೀಠಕ್ಕೆ ವಿಚಾರಣೆಯನ್ನು ವರ್ಗಾವಣೆ ಮಾಡಲಾಗಿತ್ತು. ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿಗಳಾದ ಕೃಷ್ಣ ದೀಕ್ಷಿತ್ ಮತ್ತು ಜೆ.ಎಂ.ಖಾಜಿ ಅವರನ್ನೊಳಗೊಂಡ ನ್ಯಾಯಪೀಠವು ವಿಚಾರಣೆ ನಡೆಸಿ ಹಿಜಾಬ್ ಧರಿಸುವುದು ಇಸ್ಲಾಂ ಧರ್ಮದಲ್ಲಿ ಅಗತ್ಯತೆ ಅಲ್ಲ ಎಂದು ಮಾರ್ಚ್ 15 ರಂದು ಐತಿಹಾಸಿಕ ತೀರ್ಪು ನೀಡಿದೆ.
ಇದನ್ನೂ ಓದಿ: ಹಿಜಾಬ್ ಕುರಿತ ತೀರ್ಪು: ಮುಂದಿನ ಕಾನೂನು ಹೋರಾಟದ ಬಗ್ಗೆ ಅರ್ಜಿದಾರರ ಪರ ವಕೀಲರು ಹೇಳಿದ್ದೇನು?