ಅಮರಾವತಿ: (ಆಂಧ್ರಪ್ರದೇಶ): ಮುಂದಿನ 24 ಗಂಟೆಗಳಲ್ಲಿ ಅಂದರೆ ಡಿಸೆಂಬರ್ 4ರಂದು ಜವಾದ್ ಚಂಡಮಾರುತ ಆಂಧ್ರಪ್ರದೇಶ ಮತ್ತು ಒಡಿಶಾಗೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚಿಸಿದೆ.
cyclone Jawad alert: ಆಗ್ನೇಯ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ತೀವ್ರ ವಾಯುಭಾರ ಕುಸಿತದಿಂದ ಮುಂದಿನ 12 ಗಂಟೆಗಳಲ್ಲಿ ಚಂಡಮಾರುತವಾಗಿ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಚಂಡಮಾರುತವು ಡಿಸೆಂಬರ್ 4 ರ(ನಾಳೆ) ಬೆಳಗ್ಗೆ ಉತ್ತರ ಆಂಧ್ರಪ್ರದೇಶ ಮತ್ತು ದಕ್ಷಿಣ ಒಡಿಶಾದ ಕರಾವಳಿ ದಾಟಿ, ಪಶ್ಚಿಮ ಬಂಗಾಳಕ್ಕೆ ಮುಂದುವರಿಯುವ ನಿರೀಕ್ಷೆಯಿದೆ.
ಹವಾಮಾನ ಇಲಾಖೆಯು ಆಂಧ್ರಪ್ರದೇಶದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಇಂದು ನೀಡಿದೆ. ಆಂಧ್ರಪ್ರದೇಶದ ಉತ್ತರ ಭಾಗದ ಹಲವೆಡೆ ಸಾಧಾರಣ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಆಂಧ್ರಪ್ರದೇಶದ ಬಹುತೇಕ ಭಾಗಗಳಲ್ಲಿ ಶನಿವಾರ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು, ಶುಕ್ರವಾರ ಮಧ್ಯರಾತ್ರಿಯಿಂದ ಕರಾವಳಿಯಲ್ಲಿ ಗಂಟೆಗೆ 45-65 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ.
ನಾಳೆ ಬೆಳಗ್ಗೆಯಿಂದ ಗಂಟೆಗೆ 70-90 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದೆ. ಸೋಮವಾರದವರೆಗೆ ಮೀನುಗಾರರು ಸಮುದ್ರಕ್ಕೆ ತೆರಳದಂತೆ ವಿಪತ್ತು ನಿರ್ವಹಣಾ ಆಯುಕ್ತ ಕೆ.ಕನ್ನಬಾಬು ಎಚ್ಚರಿಕೆ ನೀಡಿದ್ದಾರೆ. ಅತಿವೃಷ್ಟಿ ಹಿನ್ನೆಲೆಯಲ್ಲಿ ಒಳನಾಡಿನ ಜನರು ಜಾಗೃತರಾಗುವಂತೆ ಸಲಹೆ ನೀಡಿದ್ದಾರೆ. ರೈತರು ಕೃಷಿ ಕೆಲಸಗಳಲ್ಲಿ ತೊಡಗುವಾಗ ಸೂಕ್ತ ಕಾಳಜಿ ವಹಿಸಬೇಕು ಎಂದು ತಿಳಿಸಿದ್ದಾರೆ.
ಶ್ರೀಕಾಕುಳಂ ಜಿಲ್ಲಾಧಿಕಾರಿ ಶ್ರೀಕೇಶ್ ಲತಾಕರ್ ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದ್ದಾರೆ. ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ. ಎಲ್ಲ ಜನರು ಜಾಗೃತರಾಗಿರಲು ಸೂಚಿಸಲಾಗಿದೆ. ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ವಲಯ ಕೇಂದ್ರಗಳಲ್ಲಿ ನಿಯಂತ್ರಣ ಕೊಠಡಿಗಳನ್ನು ತೆರೆಯಲಾಗಿದೆ ಎಂದು ಡಿಸಿ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಹಳಿ ತಪ್ಪಿದ ಯಶವಂತಪುರ-ಹೌರಾ ಡುರಾಂಟೊ ಎಕ್ಸ್‌ಪ್ರೆಸ್ : ಪ್ರಯಾಣಿಕರು ಪಾರು
ವಿಶಾಖಪಟ್ಟಣಂ ಜಿಲ್ಲೆಯಲ್ಲಿ ಅಧಿಕಾರಿಗಳು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಜಿವಿಎಂಸಿ, ಕಂದಾಯ ಮತ್ತು ಜಲಸಂಪನ್ಮೂಲ ಇಲಾಖೆ ಸಿಬ್ಬಂದಿ, ಪೊಲೀಸರು ಜಾಗೃತರಾಗಬೇಕು ಎಂದು ಜಿಲ್ಲಾಧಿಕಾರಿ ಮಲ್ಲಿಕಾರ್ಜುನ ಸೂಚಿಸಿದ್ದಾರೆ. 66 ಎನ್‌ಡಿಆರ್‌ಎಫ್ ಸಿಬ್ಬಂದಿ ಮತ್ತು 55 ಎಸ್‌ಡಿಆರ್‌ಎಫ್ ಸಿಬ್ಬಂದಿಯನ್ನು ನಿಯೋಜಿಸಲು ಕ್ರಮ ಕೈಗೊಂಡಿದ್ದಾರೆ.
ವಿಜಯನಗರ ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಅಂಗನವಾಡಿಗಳೂ ಮುಚ್ಚಿವೆ. ಮುನ್ನೆಚ್ಚರಿಕೆ ಕ್ರಮವಾಗಿ 12 ಎನ್‌ಡಿಆರ್‌ಎಫ್ ತಂಡಗಳು ವಿಜಯನಗರಕ್ಕೆ ಬರಲಿವೆ.
ರಾಜ್ಯದ ವಿವಿಧ ಭಾಗಗಳ 41 ರೈಲುಗಳನ್ನು ರದ್ದುಗೊಳಿಸಲಾಗಿದೆ. ಶನಿವಾರ ಮತ್ತು ಭಾನುವಾರದಂದು ಅಧಿಕಾರಿಗಳು ದೂರದ ಪ್ರದೇಶಗಳಿಗೆ ಪ್ರಯಾಣಿಸುವ ರೈಲುಗಳನ್ನು ರದ್ದುಗೊಳಿಸಿದ್ದಾರೆ. ರೈಲು ರದ್ಧತಿ ಮಾಹಿತಿಯನ್ನು ಪ್ರಯಾಣಿಕರಿಗೆ ಮೊಬೈಲ್ ಸಂದೇಶದ ಮೂಲಕ ಮುಂಚಿತವಾಗಿ ಕಳುಹಿಸಲಾಗುತ್ತದೆ.