ನವದೆಹಲಿ: ಒಂದೆಡೆ ದೇಶದಲ್ಲಿ ಕೋವಿಡ್ ರೂಪಾಂತರಿ ಒಮಿಕ್ರಾನ್ ಆತಂಕ ಉಂಟಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 415 ಕ್ಕೆ ಏರಿಕೆಯಾಗಿದೆ. ಇನ್ನೊಂದೆಡೆ ಕಳೆದ 24 ಗಂಟೆಗಳಲ್ಲಿ 7,189 ಮಂದಿ ಹೊಸ ಕೋವಿಡ್ ಸೋಂಕಿತರು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 3,47,79,815 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ದೇಶದಲ್ಲಿ ಸದ್ಯಕ್ಕೆ ಒಟ್ಟು 77,032 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಕಳೆದ ಕೆಲ ತಿಂಗಳಿಂದ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡುಬಂದಿದೆ. ನಿನ್ನೆ 387 ಮಂದಿ ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ ದೇಶದಲ್ಲಿ ಸಾವಿನ ಸಂಖ್ಯೆ 4,79,520 ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 7,286 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದು, ಈವರೆಗೆ ದೇಶದಲ್ಲಿ 3,42,23,263 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಕಳೆದ ಒಂದೂವರೆ ತಿಂಗಳಿನಿಂದ ಹೊಸ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು 15,000 ಕ್ಕಿಂತ ಕಡಿಮೆ ಕಂಡುಬರುತ್ತಿವೆ. ದೇಶದಲ್ಲಿ ಕೋವಿಡ್ ರೂಪಾಂತರಿ ತಳಿ ಒಮಿಕ್ರಾನ್ ಆತಂಕದ ಹಿನ್ನೆಲೆ ಲಸಿಕಾ ಅಭಿಯಾನ ಕಾರ್ಯ ಚುರುಕುಗೊಳಿಸಲಾಗಿದ್ದು, ಇದುವರೆಗೆ 141.01 ಕೋಟಿ ಗೂ ಅಧಿಕ ಲಸಿಕಾ ಡೋಸ್ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
Omicron cases in India : ದೇಶದಲ್ಲಿ ಕೋವಿಡ್ ರೂಪಾಂತರಿ ತಳಿ ಒಮಿಕ್ರಾನ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಡಿಸೆಂಬರ್ 2 ರಂದು ಕರ್ನಾಟಕದಲ್ಲಿ ಮೊದಲ ಒಮಿಕ್ರಾನ್ ಪ್ರಕರಣ ಪತ್ತೆಯಾಗಿತ್ತು. ಭಾರತದಲ್ಲಿ ಸದ್ಯಕ್ಕೆ 17 ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿತರು ಕಂಡುಬಂದಿದ್ದು, ಒಟ್ಟು ಸೋಂಕಿತರ ಸಂಖ್ಯೆ 415 ಕ್ಕೆ ಏರಿಕೆಯಾಗಿದೆ. ಇದರಲ್ಲಿ ಒಟ್ಟು 115 ಮಂದಿ ಸೋಂಕಿತರು ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ತಮಿಳುನಾಡಿನಲ್ಲಿ ಈವರೆಗೆ ಒಟ್ಟು 34 ಒಮಿಕ್ರಾನ್ ಕೇಸ್ಗಳು ಕಂಡುಬಂದಿದೆ.
ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಒಮಿಕ್ರಾನ್ ಸೋಂಕಿತ ಪ್ರಕರಣಗಳು- 108 ದೃಢಪಟ್ಟಿವೆ. ದೆಹಲಿಯಲ್ಲಿ - 79, ಗುಜರಾತ್ - 43, ತೆಲಂಗಾಣ - 38, ಕೇರಳ - 37 ಮತ್ತು ತಮಿಳುನಾಡು - 34 ಮಂದಿಗೆ ಸೋಂಕು ಕಂಡುಬಂದಿದೆ.