ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ ದಾಖಲೆಯ 8,582 ಹೊಸ ಕೇಸ್‌ಗಳು ದಾಖಲಾಗಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 4,435 ಜನರು ಕೋವಿಡ್ನಿಂದ ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ದೇಶದಲ್ಲಿ 44,513 ಸಕ್ರಿಯ ಪ್ರಕರಣಗಳಿವೆ. ಈವರೆಗೆ 4,26,48,308 ಜನರು ಕೋವಿಡ್ನಿಂದ ಗುಣಮುಖರಾಗಿದ್ದು, 5,24,761 ಮಂದಿ ಸಾವನ್ನಪ್ಪಿದ್ದಾರೆ.
ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಪ್ರಕಾರ, ಜೂ.11 ರವರೆಗೆ ಕೋವಿಡ್ -19ಗಾಗಿ 85,48,59,461 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಈ ಪೈಕಿ 3,16,179 ಮಾದರಿಗಳನ್ನು ಶನಿವಾರ ಪರೀಕ್ಷಿಸಲಾಗಿದೆ.
ಮಹಾರಾಷ್ಟ್ರ ಕೋವಿಡ್ ಪ್ರಮಾಣ: ಮಹಾರಾಷ್ಟ್ರದಲ್ಲಿ ಶನಿವಾರ ಒಂದು ಸಾವಿನೊಂದಿಗೆ 2,922 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ರಾಜ್ಯವು ಹಿಂದಿನ ದಿನಕ್ಕಿಂತ 159 ಕಡಿಮೆ ಪ್ರಕರಣಗಳನ್ನು ದಾಖಲಿಸಿದೆ ಎಂದು ರಾಜ್ಯ ಆರೋಗ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕರ್ನಾಟಕದಲ್ಲೂ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ 562 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 3,955,871ಕ್ಕೆ ಏರಿಕೆಯಾಗಿದೆ.